ಬೆಂಗಳೂರು : ದಲಿತರ ಜಮೀನು ಹಕ್ಕು, ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಚಾರದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜೊತೆ ರಾಜ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ಸಮಾಲೋಚನೆ ನಡೆಸಿದರು.
ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿದೆ ಎಂದರು.
ಯಾವುದೇ ವಿವಾದ ಇಲ್ಲದೆ ಪಿಟಿಸಿಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು. ಭೂಮಿ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಉದ್ದೇಶದಿಂದ ದಲಿತ ಮುಖಂಡರ ನ್ಯಾಯವಾದಿಗಳ ಹಾಗೂ ಕಾನೂನು ತಜ್ಞರ ಅಭಿಪ್ರಾಯವನ್ನು ಪಡೆದು ಮೊದಲೇ ಕೊಟ್ಟಿದ್ದ ಭರವಸೆಯಂತೆ ಈ ಸರ್ಕಾರದ ಮೊದಲನೇ ಅಧಿವೇಶನದಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿತರಲು ಮುಂದಾಗಿದ್ದೇವೆ ಎಂದು ತಿಳಿಸಿದರು.