ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಆಯೋಜನೆ ಮಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಕುರಿತು ಎಫ್‌ಐಆರ್ ದಾಖಲಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮೇಲೆ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಡಿಕೆಶಿಗೆ ಈ ಪ್ರಕರಣದಿಂದ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು, ಇದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷರು ಹೈಕೋರ್ಟ್ ಮೆಟ್ಟಿಲೇರಿದ್ದರು. ತನ್ನ ವಿರುದ್ಧದ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್, ಅರ್ಜಿದಾರರ ಪರ ಹಾಗೂ ಸಿಬಿಐ ಪರ ವಕೀಲರ ವಾದ ಪ್ರತಿವಾದ ಆಲಿಸುತ್ತಾ ಹಲವು ಬಾರಿ ತಡೆಯಾಜ್ಞೆಯನ್ನು ವಿಸ್ತರಿಸಿತ್ತು.
ಸಿಬಿಐ ತನಿಖೆಗೆ ಅನುಮತಿ ನೀಡಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಡಿಕೆ ಶಿವಕುಮಾರ್ ಅವರಿಗೆ ಆರಂಭದಲ್ಲಿ ಬಿಗ್ ರಿಲೀಫ್ ಸಿಕ್ಕಿತ್ತು. ಫೆಬ್ರುವರಿ 24ರವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ಬಳಿಕ ನಡೆದ ವಿಚಾರಣೆಗಳ ಸಮಯದಲ್ಲಿ ಕೋರ್ಟ್, ಮಾರ್ಚ್ 31ಕ್ಕೆ, ಏಪ್ರಿಲ್ 6ಕ್ಕೆ, ಏಪ್ರಿಲ್ 13ಕ್ಕೆ, ಏಪ್ರಿಲ್ 17ರ ವರೆಗೆ ಮಧ್ಯಂತರ ತಡೆ ವಿಸ್ತರಿಸಿತ್ತು. ಮೇ ತಿಂಗಳಿನಲ್ಲಿ ನಡೆದಿದ್ದ ವಿಚಾರಣೆ ವೇಳೆಯೂ ತಡೆ ವಿಸ್ತರಿಸಲಾಗಿತ್ತು. ನಂತರದ ವಿಚಾರಣೆಯಲ್ಲಿ ಅರ್ಜಿ ವಜಾಗೊಳಿಸಲಾಗಿತ್ತು.