Share this news

ಬೆಂಗಳೂರು: ಸರ್ಕಾರದ ವತಿಯಿಂದ ಆಯೋಜಿಸಲ್ಪಡುವ ಯಾವುದೇ ಸಭೆ, ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಬಳಸಿ ಎಸೆಯುವ ಪ್ಲಾಸ್ಟಿಕ್ ನೀರಿನ ಬಾಟಲ್ ಗಳ ಬಳಕೆ, ಸರಬರಾಜನ್ನು ಸಂಪೂರ್ಣವಾಗಿ ನಿಷೇಧಿಸಿ, ಸರ್ಕಾರ ಖಡಕ್ ಆದೇಶ ಹೊರಡಿಸಿದೆ.

ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಆದೇಶ ಹೊರಡಿಸಿದ್ದು, ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿನ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಆದರೆ, ಇತ್ತೀಚಿನ ದಿನಗಳಲ್ಲಿ ಈ ಮೇಲೆ ಉಲ್ಲೇಖಿಸಿದ ಸಂಸ್ಥೆಗಳು ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಸರ್ಕಾರದ ಆದೇಶದ ಸೂಚನೆಯನ್ನು ಪಾಲಿಸಲಾಗುತ್ತಿಲ್ಲ ಎಂಬ ದೂರಿನ ಮೇರೆಗೆ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುತ್ತಿರುವುದು ಸರಿಯಲ್ಲ ವೆಂದು ಸಿಎಸ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇಂತಹ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಲ್ಲಿ ನೀಡಲಾಗಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಇನ್ನುಮುಂದೆ ಎಲ್ಲಾ ಸಭೆ-ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ನಲ್ಲಿ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಲ್ಲಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

Leave a Reply

Your email address will not be published. Required fields are marked *