Share this news

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ತಿರುಗೇಟು ನೀಡಲು ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್‌ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಮಾಡಲು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಂತ್ರಗಾರಿಕೆ ರೂಪಿಸುತ್ತಿದ್ದಾರೆ ಎನ್ನಲಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರ ಭಿನ್ನಮತ ದೆಹಲಿ ಅಂಗಳಕ್ಕೆ ತಲುಪಿದೆ. ಇದೆಲ್ಲದರ ನಡುವೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಎಡೆಮಾಡಿದೆ.

ಕ್ರೆಸೆಂಟ್ ರಸ್ತೆಯಲ್ಲಿರುವ ಜಾರಕಿಹೊಳಿ ಅವರ ಸರ್ಕಾರಿ ನಿವಾಸಕ್ಕೆ ತೆರಳಿ ಕೆಲಹೊತ್ತು ಸಮಾಲೋಚನೆ ನಡೆಸಿದ ಶಿವಕುಮಾರ್ ಬಳಿಕ ದೆಹಲಿಗೆ ತೆರಳಿದರು. ಇಬ್ಬರ ನಡುವಿನ ಮಾತುಕತೆ ಕಾಂಗ್ರೆಸ್‌ನಲ್ಲಿ ಊಹಾಪೋಹಗಳನ್ನು ಹುಟ್ಟುಹಾಕಿದೆ.

ಈ ಹಿಂದೆ ಸತೀಶ್ ಜಾರಕಿಹೊಳಿ ಅವರು ತಮ್ಮ ತವರು ಜಿಲ್ಲೆ ಬೆಳಗಾವಿಯಲ್ಲಿ ಶಿವಕುಮಾರ್ ಹಸ್ತಕ್ಷೇಪದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಶಿವಕುಮಾರ್ ನೀಡಿದ ಪ್ರಾಮುಖ್ಯತೆ ಮತ್ತು ಬೆಂಬಲ ಸತೀಶ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 18 ರಂದು ಶಿವಕುಮಾರ್ ಬೆಳಗಾವಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಿಂದ ಅವರು ದೂರ ಉಳಿದಿದ್ದರು.

ಮೂಲಗಳ ಪ್ರಕಾರ, ಸತೀಶ್ ಅವರು 20 ಶಾಸಕರನ್ನು ವಿದೇಶ ಪ್ರವಾಸಕ್ಕೆ ಕರೆದೊಯ್ಯಲು ಯೋಜಿಸಿದ್ದರು, ಹೀಗಾಗಿ ಅವರ ಮಿಷನ್ ವಿಫಲಗೊಳಿಸಲು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಧ್ಯಪ್ರವೇಶಿಸಬೇಕಾಯಿತು. ಇದರ ನಡುವೆ ವಾಲ್ಮೀಕಿ ಸಮುದಾಯದ ಧಾರ್ಮಿಕ ಮುಖ್ಯಸ್ಥರೊಬ್ಬರು ಇತ್ತೀಚೆಗೆ ಸತೀಶ್ ಅವರು ಸಿಎಂ ಆಗಲು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ಹೇಳಿದ್ದರು.
ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ರಾಜಕೀಯ ಪರಿಸ್ಥಿತಿ ಮತ್ತು ಪಕ್ಷದ ರಾಜ್ಯ ಘಟಕಕ್ಕೆ ಕಾರ್ಯಾಧ್ಯಕ್ಷ ನೇಮಕ ಮಾಡುವ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸತೀಶ್ ಸೇರಿದಂತೆ ಸಚಿವ ಸ್ಥಾನ ಪಡೆದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನು ಬದಲಿಸಲು ಎಐಸಿಸಿ ಮುಂದಾಗಿದ್ದು, ತಮ್ಮ ಆಯ್ಕೆಯ ವ್ಯಕ್ತಿಯನ್ನು ನೇಮಕ ಮಾಡಬೇಕೆಂದು ಬಯಸಿದ್ದಾರೆ.

ಮಾಜಿ ಸಚಿವ ವಿನಯ ಕುಲಕರ್ಣಿ ಮತ್ತು ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಸನ್ನಕುಮಾರ್ ಅವರನ್ನು ಕಾರ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವಂತೆ ಸತೀಶ್ ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದೆ.ಈ ನಡುವೆ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ನೇಮಿಸುವಂತೆ ಸತೀಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ, ಮಹಿಳಾ ಮತ್ತು ಮಕ್ಕಳ ಖಾತೆಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಹಣಿಯಲು ನಡೆಸಿರುವ ತಂತ್ರಗಾರಿಕೆ ಎನ್ನಲಾಗುತ್ತಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಮಹಿಳಾ ಕೋಟಾದಲ್ಲಿ ಅಂಜಲಿ ನಿಂಬಾಳ್ಕರ್ ನೇಮಕ ಬಹುತೇಕ ಖಚಿತ ಎನ್ನಲಾಗಿದೆ.

 

 

 

 

 

 

 

 

Leave a Reply

Your email address will not be published. Required fields are marked *