ಕಾರ್ಕಳ: ನರೇಂದ್ರ ಮೋದಿ ಹಾಗೂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಗಳು ಸಾಕಷ್ಟು ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಕೆಲಸ ಮಾಡಿದ್ದಾರೆ. ಮುಂದಿನ ಕರ್ನಾಟಕ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ150 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಹೇಳಿದರು.
ಅವರು ಸೋಮವಾರ ಅಜೆಕಾರಿನಲ್ಲಿ ನಡೆದ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನಡೆದ ಬೃಹತ್ ಬೈಕ್ ರ‍್ಯಾಲಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡಿದ ಅವರು, ಕಾರ್ಕಳದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಕಾರ್ಕಳಕ್ಕೆ ಮತ್ತೆ ಬಂದಿರುವುದು ಖುಷಿ ತಂದಿದೆ,ಕಾರ್ಕಳ ಶಾಸಕ ಹಾಗೂ ಸಚಿವ ಸುನಿಲ್ ಕುಮಾರ್ ಕಾರ್ಕಳದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಅತೀವವಾಗಿದೆ ಇದನ್ನು ಗಮನಿಸಿ ಸುನಿಲ್ ಕುಮಾರ್ 150 ಕ್ಕೂ ಅಧಿಕ ಕಿಂಡಿ ಅಣೆಕಟ್ಟು ನಿರ್ಮಿಸುವ ಮೂಲಕ ಜಲಕ್ರಾಂತಿ ಮಾಡಿದ್ದಾರೆ ಎಂದರು.
ರಾಜ್ಯದಲ್ಲಿ ಮೂರು ವರ್ಷಗಳ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯವು ಗಣನೀಯ ಅಭಿವೃದ್ಧಿ ಸಾಧಿಸಿದೆ.ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆ,ಉಜ್ವಲ ಗ್ಯಾಸ್ ಸಂಪರ್ಕ,ಕುಡಿಯುವ ನೀರು ಸೇರಿದಂತೆ ಮನೆಮನೆಗೆ ಯೋಜನೆಗಳನ್ನು ತಲುಪಿಸುವ ಮೂಲಕ ಮಹತ್ತರ ಸಾಧನೆ ಮಾಡಿದೆ. ಕರ್ನಾಟಕ ಮುಂದೆಯೂ ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರಬೇಕು ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಿದೆ ಎಂದರು. ಈಗಲೇ ನಾವು ಚುನಾವಣೆಗೆ ಸಿದ್ದರಾಗಬೇಕು, ಬಿಜೆಪಿ ಪಕ್ಷದಲ್ಲಿ ಪ್ರತಿ ಹಳ್ಳಿಯ ಓರ್ವ ಸಾಮಾನ್ಯ ಕಾರ್ಯಕರ್ತನಿಗೂ ಬೆಲೆಯಿದೆ,ಆದ್ದರಿಂದ ಪ್ರತಿಯೊಬ್ಬ ಕಾರ್ಯಕರ್ತ ನಾನೇ ಮೋದಿ,ನಾನೇ ಸುನಿಲ್ ಕುಮಾರ್ ಎಂಬಂತೆ ಕೆಲಸ ಮಾಡಿ ಪಕ್ಷವನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು. ಕಾರ್ಕಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರೆಂದೇ ಗೊತ್ತಿಲ್ಲ ಹಾಗಾಗಿ ಸುನಿಲ್ ಕುಮಾರ್ ಗೆಲ್ಲುವುದು ಶತಃಸಿದ್ದ ಎಂದರು.
ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿಸೂರ್ಯ ಮಾತನಾಡಿ, ರಾಷ್ಟ್ರದಲ್ಲೇ ಅತ್ಯಂತ ಹೆಚ್ಚು ವಿಮಾನ ನಿಲ್ದಾಣ ಹೊಂದಿರುವ ರಾಜ್ಯ ಕರ್ನಾಟಕ,ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಕಳೆದ 8 ವರ್ಷಗಳಲ್ಲಿ ಸಾವಿರಾರು ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಾಣಕ್ಕೆ ಸಾವಿರಾರು ಕೋಟಿ ರೂ ಬಿಡುಗಡೆ ಮಾಡಿ 70 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಡಲಾಗದ ಸಾಧನೆಯನ್ನು ಮೋದಿಯವರು ಮಾಡಿದ್ದಾರೆ ಎಂದರು.
ಡಬ್ಬಲ್ ಇಂಜಿನ್ ಸರ್ಕಾರದ ಪ್ರಯತ್ನದ ಫಲವಾಗಿ ರಾಜ್ಯದ 58% ಜನರಿಗೆ ಜಲಜೀವನ್ ಯೋಜನೆಯ ಮೂಲಕ ಮನೆಮನೆಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ದೇಶದ 5 ಟ್ರಿಲಿಯನ್ ಡಾಲರ್ ಯೋಜನೆ ಕನಸು ನನಸಾಗಬೇಕಾದರೆ ಕೇಂದ್ರ ಹಾಗೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ತರಬೇಕು ಎಂದು ಸಂಸದ ತೇಜಸ್ವಿಸೂರ್ಯ ಹೇಳಿದರು.
ಸಚಿವ ಸುನಿಲ್ ಕುಮಾರ್ ಮಾತನಾಡಿ, ಕಾರ್ಕಳದ 209 ಬೂತ್ ಗಳಲ್ಲಿ ಒಂದಲ್ಲ ಒಂದು ಅಭಿವೃದ್ಧಿ ಕೆಲಸ ಸಾಧಿಸಲಾಗಿದೆ, ಕಾಂಗ್ರೆಸ್ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲು ಸಿದ್ದರಿಲ್ಲ, ಕಾಂಗ್ರೆಸ್ ಅಪಪ್ರಚಾರದ ಮೂಲಕ ಜನರ ದಿಕ್ಕುತಪ್ಪಿಸುತ್ತಿದೆ ಅದಕ್ಕೆ ಬಿಜೆಪಿ ಕಾರ್ಯಕರ್ತರು ಅಭಿವೃದ್ಧಿ ಮೂಲಕ ತಕ್ಕ ಉತ್ತರ ನೀಡಲಿದೆ ಎಂದರು.ಮುಂದಿನ 5 ವರ್ಷಗಳಲ್ಲಿ ಇನ್ನಷ್ಟು ಯೋಜನೆಗಳನ್ನು ಅನುಷ್ಠಾನ ಮಾಡುವ ಮೂಲಕ ಕಾರ್ಕಳದ ಚಿತ್ರಣವನ್ನು ಬದಲಿಸಲು ಮತ್ತೊಮ್ಮೆ ನೀವೆಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ ನಾಯಕ್ ಕುಯಿಲಾಡಿ,ಉದಯಕುಮಾರ್ ಶೆಟ್ಟಿ, ಮಣಿರಾಜ ಶೆಟ್ಟಿ, ಬಿಜೆಪಿ ಕೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಯುವಮೋರ್ಚಾ ರಾಜ್ಯಾಧ್ಯಕ್ಷ ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಸ್ವಾಗತಿಸಿದರು. ಹರೀಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.ಕಾರ್ಕಳ ತಾಲೂಕಿನಾದ್ಯಂತ ಸುಮಾರು 5 ಸಾವಿರಕ್ಕೂ ಮಿಕ್ಕಿ ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ್ದರು. ಬಿಜೆಪಿ ಫೈರ್ ಬ್ರಾಂಡ್ ಹಾಗೂ ಯುವಕರ ಕಣ್ಮಣಿ ಕೆ.ಅಣ್ಣಾಮಲೈ ಹಾಗೂ ಸಂಸದ ತೇಜಸ್ವಿಸೂರ್ಯ ಜತೆ ಸೆಲ್ಫಿ ತೆಗೆದುಕೊಳ್ಳಲು ಯುವಕರು ಮುಗಿಬಿದ್ದ ದೃಶ್ಯ ಕಂಡುಬಂತು.