ಬೆಂಗಳೂರು: ಅಮೆರಿಕಕ್ಕೆ ತೆರಳಲು ವೀಸಾ ಪಡೆಯಬೇಕಿದ್ದರೆ ಈಗ ಚೆನ್ನೈಯಲ್ಲಿರುವ ಅಮೆರಿಕ ಕಾನ್ಸುಲೇಟ್ ಅಥವಾ ರಾಯಭಾರ ಕಚೇರಿಗೆ ತೆರಳಿ ಸಂದರ್ಶನ ಹಾಗೂ ಇತರ ಪ್ರಕ್ರಿಯೆಗಳನ್ನು ಪೂರೈಸಬೇಕಾಗುತ್ತದೆ. ಆದರೆ ಇನ್ನು ಮುಂದೆ ಅದರ ಅಗತ್ಯವಿಲ್ಲ. ಬೆಂಗಳೂರಿನಲ್ಲೇ ವೀಸಾ ಪಡೆಯುವ ಪ್ರಕ್ರಿಯೆಗಳನ್ನು ಪೂರೈಸಬಹುದು.
ಹೌದು, ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಹೊಸದಾಗಿ ದೂತಾವಾಸ ಕಚೇರಿ ಆರಂಭಿಸುವುದಾಗಿ ಅಮೆರಿಕ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸದ ಸಂದರ್ಭದಲ್ಲೇ ಅಲ್ಲಿನ ಸರ್ಕಾರ ಈ ಘೋಷಣೆ ಮಾಡಿದೆ. ಇದರೊಂದಿಗೆ, ಕನ್ನಡಿಗರ ಬಹುದಿನಗಳ ಕನಸೊಂದು ನನಸಾಗುವ ಕಾಲ ಸನ್ನಿಹಿತವಾಗಿದೆ.

ಅಮೆರಿಕವು ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಎರಡು ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲಿದೆ. ಅದೇ ರೀತಿ ಭಾರತ ಸಿಯಾಟಲ್‌ನಲ್ಲಿ ಕಚೇರಿ ತೆರೆಯಲಿದ್ದು, ಜನರ ನಡುವಿನ ಬಾಂಧವ್ಯ ಹೆಚ್ಚಳಕ್ಕೆ ನೆರವಾಗಲಿದೆ ಎಂದು ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಕಳೆದ ವರ್ಷ ಅಮೆರಿಕವು ಭಾರತೀಯ ವಿದ್ಯಾರ್ಥಿಗಳಿಗೆ ದಾಖಲೆಯ 1,25,000 ವೀಸಾಗಳನ್ನು ನೀಡಿದೆ. ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷವೊಂದರಲ್ಲೇ ಶೇಕಡಾ 20 ರಷ್ಟು ಹೆಚ್ಚಳವಾಗಿದೆ. ಇದರೊಂದಿಗೆ ಅಮೆರಿಕದಲ್ಲಿ ಅತಿದೊಡ್ಡ ವಿದೇಶಿ ವಿದ್ಯಾರ್ಥಿ ಸಮುದಾಯವಾಗಿ ಭಾರತೀಯ ವಿದ್ಯಾರ್ಥಿ ಸಮುದಾಯ ಹೊರಹೊಮ್ಮಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲು ಅಮೆರಿಕ ಉದ್ದೇಶಿಸಿದೆ. ಭಾರತವು 2023 ರಲ್ಲಿ ಸಿಯಾಟಲ್‌ನಲ್ಲಿ ದೂತಾವಾಸ ಕಚೇರಿ ತೆರೆಯುವುದನ್ನು ಅಮೆರಿಕ ಎದುರು ನೋಡುತ್ತಿದೆ ಎಂದು ಅವರು ಹೇಳಿದ್ದಾರೆ.

ಅಮೆರಿಕ ರಾಯಭಾರ ಕಚೇರಿಯು ಬೆಂಗಳೂರಿನಲ್ಲಿ ಆರಂಭವಾಗಲು ಕಾರಣೀಕರ್ತರಾದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಗುರುವಾರ ಧನ್ಯವಾದ ಅರ್ಪಿಸಿದ್ದಾರೆ. ಬೆಂಗಳೂರಿನಲ್ಲಿ ರಾಯಭಾರಿ ಕಚೇರಿಯ ಸ್ಥಾಪನೆಯ ವಿಚಾರವಾಗಿ ತೇಜಸ್ವಿ ಸೂರ್ಯ ಅವರು ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಮತ್ತು ಅಮೆರಿಕ ರಾಯಭಾರ ಕಚೇರಿಯ ಅಧಿಕಾರಿಗಳಿಗೆ ಹಲವು ಬಾರಿ ಒತ್ತಾಯಿಸಿದ್ದರು.


