ಬೆಂಗಳೂರು: ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆ ಮೂಲಕ ಪ್ರಜ್ವಲ್ ರೇವಣ್ಣಗೆ ಮಧ್ಯಂತರ ರಿಲೀಫ್ ನೀಡಲು ಹೈಕೋರ್ಟ್ ನಕಾರವೆತ್ತಿದೆ. ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ‘ಸುಪ್ರೀಂ’ಗೆ ಮೇಲ್ಮನವಿ ಸಲ್ಲಿಕೆವರೆಗೆ ತಡೆ ನೀಡಲು ಮನವಿ ಮಾಡಿದ್ದರು. ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್ ಅವರು ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ತೀರ್ಪು ಪ್ರಕಟಿಸಿರುವ ಅವರು, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದಾರೆ.
2019ರ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪ್ರಜ್ವಲ್ ರೇವಣ್ಣ ಲೋಕಸಭೆಗೆ ಹಾಜರಾದ ಅತ್ಯಂತ ಕಿರಿಯ ಸಂಸದರಲ್ಲಿ 3ನೇ ವ್ಯಕ್ತಿಯಾಗಿದ್ದರು. ಆದರೆ, ಚುನಾವಣೆಯಲ್ಲಿ ಸ್ಪರ್ಧಿಸಲು ಸಲ್ಲಿಕೆ ಮಾಡಲಾದ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿತ್ತು. ಈ ಪ್ರಕರಣದ ವಿಚಾರಣೆ ಮಾಡಿದ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಸುಳ್ಳು ಮಾಹಿತಿ ಕೊಟ್ಟಿದ್ದಾರೆಂಬ ಆಧಾರದ ಮೇಲೆ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು.