Share this news

ಬೆಂಗಳೂರು: ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲಾ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೆಲ ಸಮಯದ ಹಿಂದೆ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಸ್ಥಗಿತಗೊಂಡಿದ್ದು, ಅದನ್ನು ಪುನರಾರಂಭಿಸುವAತೆ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಎಸ್‌ಸಿ ವಿದ್ಯಾರ್ಥಿಗಳಿಗೆ ಮತ್ತು ಬುಡಕಟ್ಟು ಉಪ ಯೋಜನೆ ಅಡಿಯಲ್ಲಿ ಎಸ್‌ಟಿ ಸಮುದಾಯದವರಿಗೆ ಲ್ಯಾಪ್‌ಟಾಪ್ ವಿತರಿಸಲು ತಿಳಿಸಿದರು. ಇದಕ್ಕಾಗಿ 230 ಕೋಟಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ಸಿಎಂ ಸೂಚಿಸಿದ್ದಾರೆ.

ಜಾತಿ, ಧರ್ಮದ ಭೇದವಿಲ್ಲದೇ ಸರ್ಕಾರದ ಅಧೀನದಲ್ಲಿರುವ ಪದವಿ ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಬೇಕು. ಮುಂದಿನ ದಿನಗಳಲ್ಲಿ ನಾವು ಇದಕ್ಕಾಗಿ ಯೋಜನೆಯನ್ನು ಸಿದ್ಧಪಡಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿಶ್ವವಿದ್ಯಾಲಯಗಳು 2,865 ಅತಿಥಿ ಉಪನ್ಯಾಸಕರಿಗೆ ವೇತನ ಮತ್ತು ನಿವೃತ್ತ ನೌಕರರಿಗೆ ಪಿಂಚಣಿಯನ್ನು ಅವರಿಗೆ ಮೀಸಲಿಟ್ಟ ಹಣದಿಂದ ಪಾವತಿಸಬೇಕಿದೆ. ಇದರಿಂದ ನಮ್ಮ ಮೇಲೆ ಆರ್ಥಿಕ ಹೊರೆ ಹೆಚ್ಚಿದೆ ಎಂದು ಕೆಲವು ಉಪಕುಲಪತಿಗಳು ಸಿದ್ದರಾಮಯ್ಯ ಅವರಿಗೆ ತಿಳಿಸಿದರು. ಈ ಬಾರಿಯ ಬಜೆಟ್‌ನಲ್ಲಿ ವಿಶ್ವವಿದ್ಯಾಲಯಗಳಿಗೆ 5,470 ಕೋಟಿ ರೂ.ಗಳನ್ನು ಮೀಸಲಿಟ್ಟಿರುವುದನ್ನು ಉಲ್ಲೇಖಿಸಿದ ಅವರು, 2,474 ಕೋಟಿ ರೂ.ಗಳ ಹೆಚ್ಚುವರಿ ಅನುದಾನದ ಅಗತ್ಯವನ್ನು ಒತ್ತಿ ಹೇಳಿದರು ಎನ್ನಲಾಗಿದೆ.

Leave a Reply

Your email address will not be published. Required fields are marked *