ಭುವನೇಶ್ವರ: ಒಡಿಶಾದಲ್ಲಿ ಬೆಂಗಳೂರು-ಹೌರಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು, ಶಾಲಿಮಾರ್-ಚೆನ್ನೆöÊ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ನಡುವಿನ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರ ಸಂಖ್ಯೆ 250ಕ್ಕೆ ಏರಿಕೆಯಾಗಿದ್ದು ಸುಮಾರು 900ಕ್ಕೂ ಅಧಿಕ ಪ್ರಯಾಣಿಕರು ಸಾಧಾರಣ ಹಾಗೂ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೋಲ್ಕತ್ತಾದಿಂದ ದಕ್ಷಿಣಕ್ಕೆ 250 ಕಿ.ಮೀ ಮತ್ತು ಭುವನೇಶ್ವರದಿಂದ ಉತ್ತರಕ್ಕೆ 170 ಕಿ.ಮೀ ದೂರದಲ್ಲಿರುವ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ಬಹನಾಗ ಬಜಾರ್ ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಡಿಕ್ಕಿಯಾದ ಪರಿಣಾಮ ಎರಡೂ ರೈಲುಗಳ ಬೋಗಿಗಳು ಪಕ್ಕದ ರೈಲ್ವೇ ಹಳಿಗಳ ಮೇಲೆ ಬಿದ್ದಿವೆ. ಇದೇವೇಳೆ ಶರವೇಗದಲ್ಲಿ ಸಾಗುತ್ತಿದ್ದ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್ಪ್ರೆಸ್ ರೈಲು ಹಳಿಗಳ ಮೇಲೆ ಬಿದ್ದಿದ್ದ ಬೋಗಿಗಳಿಗೆ ಡಿಕ್ಕಿಯಾಗಿ ರಣಭೀಕರ ಸರಣಿ ಅಪಘಾತ ಸಂಭವಿಸಿದೆ ಎಂದು ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಪಿಟಿಐ ಗೆ ತಿಳಿಸಿದ್ದಾರೆ.ಈ ಭೀಕರ ದುರಂತದ ಬಳಿಕ ಘಟನಾಸ್ಥಳದಲ್ಲಿ NDRF ಹಾಗೂ SDRF ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ಮೃತಪಟ್ಟ ಪ್ರಯಾಣಿಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಆದೇಶ
ಈ ರೈಲು ದುರಂತಕ್ಕೆ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷö್ಯವೇ ಕಾರಣ ಎನ್ನಲಾಗುತ್ತಿದ್ದು,ಸಿಬ್ಬಂದಿಗಳು ಸಿಗ್ನಲ್ ನೀಡುವಲ್ಲಿ ವಿಫಲರಾಗಿ ಈ ದುರ್ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ.ಅಲ್ಲದೇ ಈ ದುರ್ಘಟನೆಯ ಹಿಂದೆ ದುಷ್ಕೃತ್ಯದ ಸಂಚು ಇದೆಯೇ ಎನ್ನುವ ಕುರಿತು ಕೂಡ ತನಿಖೆ ನಡೆಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ