Share this news

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅವಧಿಯಲ್ಲಿ ಮಳೆಯಿಲ್ಲದೇ ಬರ ಪರಿಸ್ಥಿತಿಯನ್ನು ಎದುರಾಗಿದೆ. ಈ ಹಿನ್ನೆಲೆಯಲ್ಲಿ, ಕೃಷಿ ಮತ್ತು ಕಂದಾಯ ಇಲಾಖೆಗಳ ಜಂಟಿ ಸಮೀಕ್ಷೆಯ ನಂತರ ರಾಜ್ಯದ 134 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗುವುದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೈಸರ್ಗಿಕ ವಿಕೋಪಗಳಿಗೆ ತೀರ್ಮಾನ ತೆಗೆದುಕೊಳ್ಳುವ ಸಂಪುಟ ಉಪ ಸಮಿತಿ ಸಭೆಯಲ್ಲಿ ಇನ್ನೂ 63 ತಾಲೂಕಿನಲ್ಲಿ ಮತ್ತೆ ಬೆಳೆ ಸಮೀಕ್ಷೆ ಮಾಡಲು ತೀರ್ಮಾನ ಮಾಡಿದ್ದೇವೆ. ಕೇಂದ್ರ ಸರ್ಕಾರದ ಕಡ್ಡಾಯ ಅವಶ್ಯಕತೆ ಪ್ರಕಾರ 63 ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಮಾಡಬೇಕಾಗುತ್ತದೆ. ಆಗಸ್ಟ್ ನಲ್ಲಿ ಸಭೆ ನಡೆಸಿ 134 ತಾಲೂಕಿನಲ್ಲಿ ನಾವು ಬರ ಪರಿಸ್ಥಿತಿ ಕಂಡು ಬಂದಿದೆ ಎಂಬ ತೀರ್ಮಾನಕ್ಕೆ ಬಂದಿದ್ದೆವು. ಈ 134 ತಾಲೂಕಿನಲ್ಲಿ ಜಂಟಿ( ಕೃಷಿ ಮತ್ತು ಕಂದಾಯ ಇಲಾಖೆ) ಸಮೀಕ್ಷೆ ಆದ ಬಳಿಕ ಬರ ಘೋಷಣೆ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದರು.

ಬರ ಘೋಷಣೆ ಬಳಿಕ ಕೇಂದ್ರ ಸರ್ಕಾರಕ್ಕೆ ನೆರವಿಗಾಗಿ ಮನವಿ ಸಲ್ಲಿಸಲಾಗುತ್ತದೆ. ಬರ ಘೋಷಣೆ ಬಳಿಕ ಕುಡಿಯುವ ನೀರಿನ ಕೊರತೆ ಕಂಡು ಬಂದ ವಸತಿ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಯನ್ನು ಕರ್ನಾಟಕ ವಿಪತ್ತು ನಿರ್ವಹಣಾ ನಿಧಿ (ಎಸ್‌ಡಿಆರ್‌ಎಫ್) ನಿಧಿ ಮುಖಾಂತರ ಮಾಡಲಾಗುತ್ತದೆ. ಹಾಲಿ ಪರಿಸ್ಥಿತಿಯಲ್ಲಿ ಹಸುಗಳಿಗೆ ಮೇವಿನ ಕೊರತೆಯಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಮೇವಿನ ಕೊರತೆ ಆಗಬಹುದು ಎಂದು ಮುಂಜಾಗ್ರತಾ ಕ್ರಮವಾಗಿ 20 ಕೋಟಿ ರೂ. ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಬಗ್ಗೆ, ನಿಗಾ ಮತ್ತು ನಿರ್ವಹಣೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಈವರೆಗೆ 3 ಬಾರಿ ಸಭೆ ನಡೆಸಿ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಪರಾಮರ್ಶಿಸಿದೆ. ಕೇಂದ್ರ ಸರ್ಕಾರದ ಕೃಷಿ, ಸಹಕಾರ ಮತ್ತು ರೈತರ ಕಲ್ಯಾಣ ಮಂತ್ರಾಲಯದ ಪರಿಷ್ಕೃತ ಬರ ಕೈಪಿಡಿ 2020ರಲ್ಲಿ ಸೂಚಿಸಲಾಗಿರುವ, ಕಡ್ಡಾಯ ಮಾನದಂಡಗಳಾದ ಮಳೆ ಕೊರತೆ (ಶೇಕಡಾ-60), ಸತತ 3 ವಾರಗಳ ಶುಷ್ಕ ವಾತಾವರಣ ಹಾಗೂ ಇತರೆ ತತ್ಪರಿಣಾಮ ಮಾನದಂಡಗಳ (ಉಪಗ್ರಹ ಆಧಾರತ ಬೆಳೆ ಸೂಚ್ಯಂಕ, ತೇವಾಂಶ ಕೊರತೆ ಹಾಗೂ ಜಲ ಸಂಪನ್ಮೂಲ ಸೂಚ್ಯಂಕ) ಅನ್ವಯ, ರಾಜ್ಯದಲ್ಲಿ ಬರ ಪರಿಸ್ಥಿತಿ ಕಂಡುಬAದಿರುವ 113 ತಾಲೂಕುಗಳನ್ನು ಕ್ಷೇತ್ರ ಪರಿಶೀಲನೆ ಹಾಗೂ ದೃಢೀಕರಣಕ್ಕಾಗಿ ಜಂಟಿ ಸಮೀಕ್ಷೆ ಕೈಗೊಂಡು ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು.

Leave a Reply

Your email address will not be published. Required fields are marked *