ಕಾರ್ಕಳ :ಪಕ್ಷ ವಿರೋಧಿ ಚಟುವಟಿಕೆ ಹಾಗೂ ಪಕ್ಷದ ಶಿಸ್ತು ಉಲ್ಲಂಘಿಸಿದ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಪಕ್ಷದಿಂದ ಉಚ್ಛಾಟಿಸಿ ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಆದೇಶ ಹೊರಡಿಸಿದ್ದಾರೆ.
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಕಾರ್ಯಕರ್ತ ಸುಭಾಷ್ ಚಂದ್ರ ಹೆಗ್ಡೆ ಹಾಗೂ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯ ಶುಭದರ್ ಮುದ್ರಾಡಿ ಇವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಇವರು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು 2023 ಮೇ ತಿಂಗಳಲ್ಲಿ ನಡೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆ ವೇಳೆ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡಿದ್ದು ಪಕ್ಷದ ನಿಲುವಿನ ವಿರುದ್ಧ ವರ್ತಿಸಿ ಪಕ್ಷಕ್ಕೆ ಅಗೌರವ ತೋರಿ ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಈ ಹಿನ್ನೆಲೆಯಲ್ಲಿ ಅವರ ಅಶಿಸ್ತಿನ ನಿಲುವನ್ನು ಪಕ್ಷ ವಿರೋಧಿ ಚಟುವಟಿಕೆಯೆಂದು ಪರಿಗಣಿಸಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಮಹಾವೀರ ಹೆಗ್ಡೆ ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ, ಇದಲ್ಲದೇ ಇನ್ನಷ್ಟು ಮಂದಿ ಕಾರ್ಯಕರ್ತರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಪಕ್ಷದಿಂದ ಉಚ್ಚಾಟಿಸಲಾಗುವುದೆಂದು ಮಹಾವೀರ ಹೆಗ್ಡೆ ಎಚ್ಚರಿಸಿದ್ದಾರೆ.

