ಕಾರ್ಕಳ: ಕ್ರೀಡೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರಿಂದ ದೈಹಿಕ ವ್ಯಾಯಾಮದ ಜತೆಗೆ ಮಾನಸಿಕ ಸಧೃಡತೆ ಹಾಗೂ ಆರೋಗ್ಯಕ್ಕೂ ಅತ್ಯುತ್ತಮ ಎಂದು ಮೂಡಬಿದಿರೆ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ರಾಮಚಂದ್ರ ಕೆಂಬಾರೆ ಹೇಳಿದರು.
ಅವರು ಕಾರ್ಕಳ ಹೆಬ್ರಿ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಬಳಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಕಳ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ತಾಲೂಕು ಅಧಿಕಾರಿ ರಿತೇಶ್ ಶೆಟ್ಟಿ ಮಾತನಾಡಿ, ವಿಶ್ವಾಸ,ನಂಬಿಕೆ ಹಾಗೂ ಪರಿಶ್ರಮಕ್ಕೆ ಮರಾಠಿ ಸಮುದಾಯ ಹೆಸರುವಾಸಿಯಾಗಿದೆ. ಶಿವಾಜಿಯ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮರಾಠಿ ಸಮುದಾಯ ಜನರು ಸ್ವಾಭಿಮಾನದ ಜೀವನ ನಡೆಸುತ್ತಿದ್ದಾರೆ.ಆರ್ಥಿಕವಾಗಿ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಮರಾಠಿ ಸಮುದಾಯ ರಾಜಕೀಯ ಚಟುವಟಿಕೆಗಳಲ್ಲಿಯೂ ಹೆಚ್ಚುಹೆಚ್ಚು ತೊಡಗಿಸಿಕೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಎಸ್ಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಂಘದ ಮಾಜಿ ಅಧ್ಯಕ್ಷ ರಾಘವ ನಾಯ್ಕ್, ಯುವ ವೇದಿಕೆ ಅಧ್ಯಕ್ಷ ನಾಗೇಂದ್ರ ನಾಯ್ಕ್ ಚಾರ, ಸಂಘದ ಕಾರ್ಯದರ್ಶಿ ಹರೀಶ್ ನಾಯ್ಕ್, ಮಹಿಳಾ ಘಟಕದ ಅಧ್ಯಕ್ಷೆ ರಾಜಶ್ರೀ ಸಂತೋಷ್, ಸುಗಂಧಿ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶಂಕರ ನಾಯ್ಕ್ ದುರ್ಗಾ ವಹಿಸಿದರು.
ಸುಗಂಧಿ ನಾಯ್ಕ್ ಶಿವಪುರ ಸ್ವಾಗತಿಸಿ, ಸಂಘದ ಕ್ರೀಡಾ ಕಾರ್ಯದರ್ಶಿ, ದೈಹಿಕ ಶಿಕ್ಷಣ ಶಿಕ್ಷಕ ಶೇಖರ ಕಡ್ತಲ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.