ಕಾರ್ಕಳ: ಕಾರ್ಕಳ ವಿಧಾಸಭಾ ಕ್ಷೇತ್ರದಾದ್ಯಂತ ಬಿರುಸಿನ ಮತದಾನ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಅತ್ಯಂತ ಶಾಂತಿಯುತವಾಗಿ ನಡೆಯುತ್ತಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಘಟಾನುಘಟಿ ಅಭ್ಯರ್ಥಿಗಳು ಈಗಾಗಲೇ ಮತ ಚಲಾಯಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ನಿಟ್ಟೆ ಗ್ರಾಮದ ಅತ್ತೂರು ಕಲಂಬಪಾಡಿಪದವು ಪ್ರಾಥಮಿಕ ಶಾಲೆಯಲ್ಲಿ ತನ್ನ ಕುಟುಂಬದ ಸದಸ್ಯರೊಂದಿಗೆ ಮತಗಟ್ಟೆಗೆ ಆಗಮಿಸಿ ಮತಚಲಾಯಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ತನ್ನ ಕುಟುಂಬದ ಸದಸ್ಯರ ಜತೆ ಮುನಿಯಾಲು ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಆಗಮಿಸಿ ಮತಚಲಾಯಿಸಿದರು. ಅಲ್ಲದೇ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಅವರು ಕಾರ್ಯಕರ್ತರ ಜತೆಗೂಡಿ ಕಾರ್ಕಳದ ಕುಕ್ಕುಂದೂರು ಮತಗಟ್ಟೆಯಲ್ಲಿ ಮತ ಚಲಾಯಿಸಿದರು
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರವು ಅತ್ಯಂತ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದು, ಪ್ರಚಾರದ ರಂಗು ಕೂಡ ಜೋರಾಗಿತ್ತು.ಹಾಲಿ ಶಾಸಕ ಹಾಗೂ ಬಿಜೆಪಿಯ ಅಭ್ಯರ್ಥಿ ಸುನಿಲ್ ಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷದ ಉದಯ ಶೆಟ್ಟಿ ಹಾಗೂ ಪಕ್ಷೇತರರಾಗಿ ಸ್ಪರ್ಧಿಸಿದ ಪ್ರಮೋದ್ ಮುತಾಲಿಕ್ ಪ್ರಬಲ ಎದುರಾಳಿಯಾಗಿದ್ದಾರೆ. ಇತ್ತ ಜೆಡಿಎಸ್ ಹಾಗೂ ಆಮ್ ಆದ್ಮಿ ಕೂಡ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಚುನಾವಣಾ ರಣಕಣ ತೀವೃ ಪೈಪೋಟಿಯಿಂದ ಕೂಡಿದೆ.
ಅಭ್ಯರ್ಥಿಗಳ ಭವಿಷ್ಯವನ್ನು ಇಂದು ಮತದಾರಪ್ರಭು ನಿರ್ಧರಿಸಲಿದ್ದು, ಅಂತಿಮವಾಗಿ ಫಲಿತಾಂಶದ ದಿನ ವಿಜಯಲಕ್ಷಿö್ಮ ಯಾರಿಗೆ ಒಲಿಯುತ್ತಾಳೆ ಎನ್ನುವುದು ಕಾದುನೋಡಬೇಕಿದೆ