ಬೆಂಗಳೂರು:ತೀವೃ ಮಳೆ ಕೊರತೆಯ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಯುತ್ತಿರುವುದನ್ನು ತಕ್ಷಣವೇ ನಿಲ್ಲಿಸುವಂತೆ ಪ್ರತಿಭಟನಾಕಾರರು ಹೋರಾಟ ಇಂದು ಕೂಡ ಮುಂದುವರೆಯಲಿದ್ದು, ಇಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಧರಣಿ ಸತ್ಯಾಗ್ರಾಹ ನಡೆಯಲಿದೆ.
ಈ ಬಗ್ಗೆ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ರಾಜ್ಯಕ್ಕೆ ಕಾವೇರಿ ನೀರು ಸಿಗುತ್ತಿಲ್ಲ,ನಮ್ಮ ನಾಡಿನ ಜೀವಜಲವನ್ನು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಲು, ಕನ್ನಡ ಒಕ್ಕೂಟದ ಆಶ್ರಯದಲ್ಲಿ ಇಂದು ಮಧ್ಯಾಹ್ನ 12 ಗಂಟೆಯವರೆಗೆ ಮುಖ್ಯಮಂತ್ರಿಗಳ ಮನೆಯ ಮುಂದೆ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯಿಂದ ಮೆರವಣಿಗೆ ಮೂಲಕ ತೆರಳಲಿರುವ ಪ್ರತಿಭಟನಾಕಾರರು ಮುಖ್ಯಮಂತ್ರಿಗಳ ನಿವಾಸದ ಮುಂದೆ ಸತ್ಯಾಗ್ರಹ ನಡೆಸಲಿದ್ದಾರೆ.

ಈ ಸತ್ಯಾಗ್ರಹದಲ್ಲಿ ಕನ್ನಡ ಒಕ್ಕೂಟದ ಮುಖಂಡರಾದ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘಟ ಅಧ್ಯಕ್ಷ ಸಾ.ರಾ ಗೋವಿಂದ್, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಪ್ರವೀಣ್ ಕುಮಾರ್, ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಎಂ ಕುಮಾರ್ ಸೇರಿದಂತೆ ಇತರರು ಭಾಗಿಯಾಗಲಿದ್ದಾರೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಇದಲ್ಲದೇ ಕಾವೇರಿ ನೀರು ವಿಚಾರದಲ್ಲಿ ಸೆ.29ರಂದು ಶುಕ್ರವಾರ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ


