ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯವನ್ನು ಕಲ್ಪಿಸಲುವ ಆದೇಶ ಸದ್ಯದಲ್ಲೇ ಜಾರಿಗೊಳ್ಳಲಿದೆ. ಈ ನಡುವೆ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವಂತೆ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ.
ಇಂದು ಅವರು ಈ ಬಗ್ಗೆ ಟ್ವಿಟ್ ಮಾಡಿದ್ದು, ಉಡುಪಿ, ದಕ್ಷಿಣಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ .
ರಾಜ್ಯ ಸರ್ಕಾರದ ನಿರ್ಧಾರದಿಂದ ಸಾರಿಗೆ ಸೌಲಭ್ಯವಿಲ್ಲದ ಜಿಲ್ಲೆಗಳ ಜನರಿಗೆ ಯಾವುದೇ ಪ್ರಯೋಜನ ಉಂಟಾಗುವುದಿಲ್ಲ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಲ್ಕು ಸಾರಿಗೆ ನಿಗಮಗಳೊಂದಿಗೆ ಸಭೆಯನ್ನು ನಡೆಸಿದ ಬಳಿಕ ಮಾತನಾಡಿ, ರಾಜ್ಯಾಧ್ಯಂತ ಯಾವುದೇ ಷರತ್ತುಗಳಿಲ್ಲದೆ ಮಹಿಳೆಯರಿಗೆ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂಬುದಾಗಿ ಘೋಷಿಸಿದ್ದರು. ಈ ಬಗ್ಗೆ ಶೀಘ್ರವೇ ಆದೇಶ ಕೂಡ ಹೊರ ಬೀಳುವ ಸಾಧ್ಯತೆ ಇದೆ.