ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಲ್ಮೆಟ್ ಹಾಕದೇ ಬೈಕ್ ಸವಾರಿ ಮಾಡಿದ್ದ ವಕೀಲ ಪ್ರೀತಮ್ ಎಂಬವರ ಮೇಲೆ ಪೊಲೀಸರು ನಡೆಸಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 5 ಎಫ್ಐಆರ್ ಗಳನ್ನು ಸಿಐಡಿ ಗೆ ವರ್ಗಾಯಿಸಲಾಗಿದೆ ಎಂದು ಹೈಕೋರ್ಟ್ ಗೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಪ್ರಕರಣ ಕುರಿತಂತೆ ಹೈಕೋರ್ಟ್ ವಿಭಾಗಿಯ ಪೀಠದಲ್ಲಿ ಪಿಐಎಲ್ ವಿಚಾರಣೆ ನಡೆದಿದ್ದು, ವಕೀಲರ ಮೇಲಿನ ಹಲ್ಲೆ ಸೇರಿ ಪೊಲೀಸರ ವಿರುದ್ಧದ ಪ್ರಕರಣಗಳ ತನಿಖೆಗೆ ಸಿಐಡಿ ಗೆ ವರ್ಗಾಯಿಸಲಾಗಿದೆ ಎಂದು ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದ್ದು,ಪ್ರತಿಭಟನೆ ನಡೆಸಿದ ವಕೀಲರ ಮೇಲೆಯೂ FIR ದಾಖಲಿಸಲಾಗಿದೆ. ಆರೋಪಿ ಪೊಲೀಸರನ್ನು ಹಾರ ಹಾಕಿ ಮೆರವಣಿಗೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು ಸೂಕ್ತ ತನಿಖೆಗೆ ವಕೀಲರ ಸಂಘ ಮನವಿ ಮಾಡಿದೆ.ಚಿಕ್ಕಮಗಳೂರು ಠಾಣೆಯಲ್ಲಿ ವಕೀಲ ಪ್ರೀತಮ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ಮಾಡಿರುವ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಉಡುಪಿ ಕೋರ್ಟ್ ಆವರಣದಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು.
15 ನಿಮಿಷ ಕೋರ್ಟ್ ಕಲಾಪ ಬಹಿಷ್ಕರಿಸಿ ವಕೀಲರು ಪ್ರತಿಭಟನೆ ನಡೆಸಿದರು.ವಕೀಲರ ರಕ್ಷಣಾ ಕಾಯ್ದೆಯನ್ನು ಶೀಘ್ರವೇ ಜಾರಿ ಮಾಡಬೇಕು ಪ್ರತಿಭಟನೆ ನಡೆಸಿರುವ ಪೊಲೀಸರನ್ನು ಸೇವೆಯಿಂದ ವಜಾಗೊಳಿಸಬೇಕು. ಕ್ರಮ ಕೈಗೊಳ್ಳದಿದ್ದರೆ ಬೀದಿಗಿಳಿದು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.