ಮಂಗಳೂರು: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಅಧಿಕಾರಿಗಳು ಗೌರವ ನೀಡುತ್ತಿಲ್ಲ,ಇದರಿಂದ ಶಾಸಕರ ಹಕ್ಕುಚ್ಯುತಿಯಾಗಿದೆ,ಇದು ಶಾಸಕಾಂಗ ವ್ಯವಸ್ಥೆಗೆ ಮಾರಕವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಆರೋಪಿಸಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಶಾಸಕರಾದ ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ವೇದವ್ಯಾಸ ಕಾಮತ್, ಪ್ರತಾಪ್ ಸಿಂಹ ನಾಯಕ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ದ.ಕ ಜಿಲ್ಲಾಡಳಿತ ಆಡಳಿತ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದು ಇದರಿಂದ ಶಾಸಕರ ಹಕ್ಕು ಚ್ಯುತಿಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಉದ್ದೇಶಪೂರ್ವಕವಾಗಿ ಬಿಜೆಪಿ ಶಾಸಕರ ಹಕ್ಕು ಚ್ಯುತಿಯಾಗುತ್ತಿದೆ. ಅಧಿಕಾರಿಗಳಿಗೆ ಸಿಎಂ ಸೂಚನೆ ಕೊಟ್ಟರೂ ಅಧಿಕಾರಿಗಳು ಕ್ಯಾರೇ ಅನ್ನುತ್ತಿಲ್ಲ ಎಂದಾದರೆ ಸರ್ಕಾರದ ವೈಫಲ್ಯ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ, ಡಿಸಿ ಕಛೇರಿಯ ಪ್ರೊಟೋಕಾಲ್ ಪ್ರಕಾರವೇ ಕಾರ್ಯಕ್ರಮ ಆಯೋಜಿಸಿದರೂ ಕಡೇ ಕ್ಷಣದಲ್ಲಿ ಕಾರ್ಯಕ್ರಮ ರದ್ದು ಮಾಡಲಾಗುತ್ತಿದೆ.ಮೇಲಾಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ರದ್ದು ಮಾಡಿದ್ದೇವೆ ಎಂದು ಅಧಿಕಾರಿಗಳು ಹಾರಿಕೆಯ ಉತ್ತರ ಕೊಡುತ್ತಾರೆ. ಇದರ ವಿರುದ್ಧ ಆಗಸ್ಟ್ 14ರಂದು ಡಿಸಿ ಕಛೇರಿ ಮುಂಭಾಗದಲ್ಲಿ ಧರಣಿ ಮಾಡುವುದಾಗಿ ಬಿಜೆಪಿ ಶಾಸಕರು ಎಚ್ಚರಿಸಿದ್ದಾರೆ.