ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಇಂದು ಅಧಿಸೂಚನೆ ಪ್ರಕಟವಾಗಲಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪಚುನಾವಣೆಗೆ ಜೂನ್ 20 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂನ್ 21 ರಂದು ನಾಮಪತ್ರ ಪರಿಶೀಲನೆ ನಡೆಸಲಿದೆ. 23 ರಂದು ಉಮೇದುದಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ.

ಜೂನ್ 30 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆದು, ಸಂಜೆ 5 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ದಿನ ಮೂರು ಸ್ಥಾನಗಳಿಗೆ ಪ್ರತ್ಯೇಕ ಚುನಾವಣೆ ನಡೆಯಲಿದೆ.

ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಲಕ್ಷ್ಮಣ್ ಸವದಿ, ಆರ್. ಶಂಕರ್ ಹಾಗೂ ಬಾಬುರಾವ್ ಚಿಂಚನಸೂರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಪಕ್ಷ ತೊರೆದು ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈ ಮೂರು ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದೆ.


