ಕಾರ್ಕಳ: ಜಿಲ್ಲಾ ಪಂಚಾಯಿತಿಗಳಿಗೆ ಕಳೆದ ಎರಡು ವರ್ಷಗಳಿಂದ ಚುನಾವಣೆ ನಡೆಯದೇ ಆಡಳಿತಾಧಿಕಾರಿಗಳೇ ಆಡಳಿತ ನಡೆಸುತ್ತಿರುವ ಕಾರಣದಿಂದ ಅಭಿವೃದ್ಧಿ ಕಾರ್ಯಗಳಿಗೂ ಹಿನ್ನಡೆಯಾಗಿದೆ ಎನ್ನುವ ಮಾತುಗಳು ಕೇಳಿಬಂದಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಮುಂದಿನ ಡಿಸೆಂಬರ್ ಅಂತ್ಯದೊಳಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ನಡೆಯುವ ಕುರಿತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುಳಿವು ನೀಡಿದ್ದಾರೆ.
ಶನಿವಾರ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು ಮುಂಬರುವ ನವೆಂಬರ್ ಅಥವಾ ಡಿಸೆಂಬರ್ ಒಳಗಾಗಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು ಇದಕ್ಕೆ ಕಾರ್ಯಕರ್ತರು ಈಗಿನಿಂದಲೇ ಸಿದ್ಧರಾಗಬೇಕೆಂದು ಕರೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳನ್ನು ಪಡೆಯಬೇಕೆಂದರು.
ಈ ಎಲ್ಲದರ ನಡುವೆ ಜನಸಂಖ್ಯೆಗೆ ಅನುಗುಣವಾಗಿ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ,ಮತದಾರರ ಪಟ್ಟಿ ಪರಿಷ್ಕರಣೆ ಮುಗಿಯಬೇಕಿದ್ದು ಇದೆಲ್ಲವನ್ನೂ ನಿಗದಿತ ಅವಧಿಯೊಳಗೆ ಮುಗಿಸಿದ್ದಲ್ಲಿ ಡಿಸೆಂಬರ್ ವೇಳೆಗೆ ಚುನಾವಣೆ ನಡೆದರೂ ಅಚ್ಚರಿಯಿಲ್ಲ. ಆದರೆ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆಗೆ ಸರ್ಕಾರ ಮುಂದಾಗುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ