ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ ನಡೆಯುವ ಸಾಧ್ಯತೆಯಿದೆ ಎಂದು ವಿಧಾನಸಭಾಧ್ಯಕ್ಷ ಯು ಟಿ ಖಾದರ್ ತಿಳಿಸಿದ್ದಾರೆ.
ಡಿಸೆಂಬರ್ 4 ರಂದು ಪ್ರಾರಂಭವಾಗಬಹುದು ಮತ್ತು ಈ ಕುರಿತು ಶೀಘ್ರದಲ್ಲೇ ಅಧಿಕೃತವಾಗಿ ಘೋಷಣೆ ಮಾಡಲಾಗುವುದು. ಈ ಅಧಿವೇಶನವು 12 ದಿನಗಳ ಕಾಲ ನಡೆಯಬಹುದು ಮತ್ತು ಇದು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಮತ್ತು ಈ ಭಾಗದ ಜನರ ಆಶೋತ್ತರಗಳ ಮೇಲೆ ಕೇಂದ್ರೀಕೃತವಾಗಲಿದೆ ಎಂದು ಅವರು ಹೇಳಿದರು.
ಬೆಳಗಾವಿಯಲ್ಲಿ 15 ದಿನಗಳ ಕಾಲ ಅಧಿವೇಶನ ನಡೆಯಬೇಕು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇತ್ತೀಚೆಗೆ ಅಭಿಪ್ರಾಯಪಟ್ಟಿದ್ದರು. 400 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಿರುವ ಸುವರ್ಣ ವಿಧಾನಸೌಧವನ್ನು ಸಂಪೂರ್ಣವಾಗಿ ಬಳಸಿಕೊಳ್ಳದೇ ನಿರುಪಯುಕ್ತವಾಗಬಾರದು ಎಂದು ಹೊರಟ್ಟಿ ಹೇಳಿಕೆ ನೀಡಿದ್ದರು.






