Share this news

ನವದೆಹಲಿ:ರಾಜ್ಯದಲ್ಲಿ ಉದ್ಭವಿಸಿರುವ ತೀವ್ರ ಬರದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬರ ಪರಿಸ್ಥಿತಿಯ ಕುರಿತು ವಿವರಿಸಿದರು.
ಬರದಿಂದ ಅಪಾರ ಹಾನಿಯಾಗಿದ್ದು ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಸಿಎಂ ಮನವಿ ಮಾಡಿದರು
ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.
ರಾಜ್ಯದಲ್ಲಿ 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. NDRF ನಿಂದ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಿದ್ದಾರೆ. ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲೂಕು ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಒತ್ತಾಯಿಸಿದರು.
ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577 ಕೋಟಿ ರೂ. ಮೊತ್ತವೂ ಸೇರಿದೆ. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *