Share this news

ಬೆಂಗಳೂರು: ರಾಜ್ಯದ ಅತ್ಯಂತ ಪ್ರಭಾವಿ ಸಚಿವ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ನಿರ್ವಹಿಸುತ್ತಿರುವ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಏಕಾಎಕಿ ಮೇಜರ್ ಸರ್ಜರಿ ಮಾಡಿ ಆದೇಶ ನೀಡಿರುವುದು ಅಚ್ಚರಿ ಮೂಡಿಸಿದೆ.
ಪ್ರಿಯಾಂಕ್‌ ಖರ್ಗೆ ಅವರ ಇಲಾಖೆಯಲ್ಲಿ ಸುಖಾಸುಮ್ಮನೆ ಅಸ್ತಿತ್ವದಲ್ಲಿದ್ದ ಹುದ್ದೆಗಳನ್ನು ಸೃಜಿಸಿ, ನಿವೃತ್ತ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು, ಆದ್ದರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ನಿವೃತ್ತ ಅಧಿಕಾರಿಗಳದ್ದೇ ಕಾರುಬಾರು ಆಗಿತ್ತು. ಇದರಿಂದ ಇಲಾಖೆಯ ಹಾಲಿ ಸರ್ಕಾರಿ ನೌಕರರು ಬೇಸತ್ತು ಹೋಗಿದ್ದರು. ಜೊತೆಗೆ, ಸರ್ಕಾರಕ್ಕೆ ಭಾರಿ ನಷ್ಟವಾಗುತ್ತಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ತರಲಾಗಿತ್ತು.
ಎಲ್ಲಾ ಮಾಹಿತಿಯನ್ನು ಪಡೆದು ಸರ್ಕಾರದ ಮುಖ್ಯ ಕಾರ್ಯದರ್ಶಿಯೊಂದಿಗೆ ಚರ್ಚೆ ಮಾಡಿದ್ದು, ಈ ಬಗ್ಗೆ ಸತ್ಯಾಸತ್ಯತೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಿವೃತ್ತ ನೌಕರರನ್ನು ವಜಾಗೊಳಿಸಲು ಸಿಎಂ ಸೂಚಿಸಿದ್ದಾರೆ.
ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ/ ಸಚಿವಾಲಯದಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿ/ನೌಕರರನ್ನು ಸಂವಿಧಾನದಲ್ಲಿರದ ಅನಗತ್ಯ ಹುದ್ದೆಗಳನ್ನು ಸೃಜಿಸಿ ಸಮಾಲೋಚಕರು/ ವಿಶೇಷ ಸಂಪನ್ಮೂಲ ವ್ಯಕ್ತಿಯೆಂದು ಗ್ರೂಪ್-ಎ ಹಾಗೂ ಇತರೆ ಹುದ್ದೆಗಳಿಗೆ ಗುತ್ತಿಗೆ/ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ನಿವೃತ್ತ ನೌಕರರಿಗೆ ಹೆಚ್ಚು ವೇತನ, ವಾಹನ ಸೇರಿ ಇತರೆ ಸೌಲಭ್ಯ ನೀಡುತ್ತಿದ್ದು, ಸರ್ಕಾರಕ್ಕೆ ಭಾರೀ ಪ್ರಮಾಣದ ಆರ್ಥಿಕ ನಷ್ಟ ಉಂಟಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶಗೊಂಡಿದ್ದಾರೆ.

ನಿವೃತ್ತ ನೌಕರರಿಂದ ಸರ್ಕಾರಕ್ಕೆ ಆರ್ಥಿಕ ನಷ್ಟ ಜೊತೆಗೆ ಕಾರ್ಯಕ್ಷಮತೆ ಗುಣಮಟ್ಟ ಹಾಗೂ ಉತ್ತರದಾಯಿತ್ವದ ಕೊರತೆಯೂ ಎದ್ದು ಕಾಣುತ್ತಿದೆ. ಆದ್ದರಿಂದ ಪ್ರಿಯಾಂಕ್ ಖರ್ಗೆ ಅವರ ಇಲಾಖೆಯಲ್ಲಿನ ಅನಗತ್ಯ ಹುದ್ದೆಗಳನ್ನು ತೆರವುಗೊಳಿಸಿ ಹಾಲಿ ಸರ್ಕಾರಿ ನೌಕರರನ್ನು ನಿಯೋಜನೆ ಮಾಡಬೇಕು. ಜೊತೆಗೆ, ಹಾಲಿ ಗುತ್ತಿಗೆ/ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿಕಾರಿ/ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆ ಮಾಡಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಆದ್ದರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ/ ಸಚಿವಾಲಯ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಲಿ ಗುತ್ತಿಗೆ/ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿಕಾರಿ/ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲಾಗುತ್ತದೆ. ಜೊತೆಗೆ, ಆಯಾ ಸ್ಥಾನಗಳಿಗೆ ಹಾಲಿ ನೌಕರರನ್ನು ನಿಯೋಜನೆ ಮಾಡಿ ಅಗತ್ಯ ಕ್ರಮಗಳನ್ನು ಕೈಗೊಂಡು, ಕ್ರಮದ ವರದಿಯನ್ನು ಕೂಡಲೇ ಮುಖ್ಯ ಕಾರ್ಯದರ್ಶಿ ಕಚೇರಿಗೆ ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಅವರು ಆದೇಶ ಹೊರಡಿಸಿದ್ದಾರೆ.

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *