ಕಾರವಾರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಂಸದ ಊಟ ಮಾಡಿ ದೇವಸ್ಥಾನ ಪ್ರವೇಶಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಸಿ.ಟಿ,ರವಿ ಬಾಡೂಟ ಸೇವಿಸುತ್ತಿರುವ ಹಾಗೂ ದೇವಸ್ಥಾನಕ್ಕೆ ಭೇಟಿ ನೀಡುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಮೀನು ತಿಂದು ಧರ್ಮಸ್ಥಳಕ್ಕೆ ಹೋಗಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು, ಆಗ ಸಿದ್ದರಾಮಯ್ಯ ಅವರ ವಿರುದ್ದ ಅನೇಕ ಹಿಂದೂ ಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರುಗಳು ಕಿಡಿಕಾರಿದ್ದರು, ಈಗ ಸಿಟಿ ರವಿ ವಿರುದ್ದ ಕೇಳಿ ಬಂದಿರುವ ಆರೋಪಕ್ಕೆ ಯಾವ ರೀತಿಯಲ್ಲಿ ಉತ್ತರ ನೀಡಲಿದ್ದಾರೆ ಎನ್ನುವುದನ್ನು ಕಾದು ನೊಡಬೇಕಾಗಿದೆ.
ಫೆ.19ರಂದು ಸಿ.ಟಿ.ರವಿ ಉತ್ತರಕನ್ನಡ ಜಿಲ್ಲೆಗೆ ಆಗಮಿಸಿದ್ದ ಸಂದರ್ಭ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಬಾಡೂಟ ಸೇವಿಸಿದ್ದ ಬಳಿಕ ಅವರು ಹಳೇ ಬಸ್ ನಿಲ್ದಾಣ ಸಮೀಪವಿರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಸ್ಥಾನದ ಬಾಗಿಲಲ್ಲೇ ಸನ್ಮಾನವನ್ನೂ ಸ್ವೀಕರಿಸಿದ್ದರು.
ಈಗ ಅದು ವಿವಾದಕ್ಕೆ ಕಾರಣವಾಗಿದ್ದು, ಸಿ.ಟಿ,ರವಿ ಬಾಡೂಟ ಸೇವಿಸುತ್ತಿರುವ ಹಾಗೂ ದೇವಸ್ಥಾನಕ್ಕೆ ಭೇಟಿ ನೀಡುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಕುರಿತು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನಾನು ಚರ್ಚೆ ಮಾಡಲು ಹೋಗಲ್ಲ , ಭೂತದ ಭಾಯಲ್ಲಿ ಭಗವದ್ಗೀತೆ ಎಂದು ಜನರಿಗೆ ಗೊತ್ತಿದೆ ಎಂದು ಹೇಳಿದರು.
ಬಿಜೆಪಿಯವರಿಗೆ ಸ್ಪಷ್ಟವಾದ ವಿಚಾರಧಾರೆ ಇಲ್ಲ, ಇದು ಚರ್ಚೆ ಮಾಡಬೇಕಾದ ವಿಷಯ ಅಲ್ಲ, ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆ ಹೇಳಲಿ, ಟಿಪ್ಪು, ಅಬ್ಬಕ್ಕ, ಗಾಂಧೀಜಿ ಬಗ್ಗೆ ಮಾತನಾಡುವುದು ಸರಿಯಲ್ಲ, ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾರೆ ಎಂದು ಜನರಿಗೆ ಗೊತ್ತು ಎಂದು ಸಿದ್ದರಾಮಯ್ಯ ಹೇಳಿದರು.