Share this news

ಬೆಂಗಳೂರು: ಮುಸ್ಲಿಂ ಮೀಸಲಾತಿ 2ಬಿಯನ್ನು  ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್‌ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. 

 ಸುಪ್ರೀಂ ಕೋರ್ಟ್​​ನ ಈ ತಡೆಯಾಜ್ಞೆಯಿಂದ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ ಹೆಚ್ಚುವರಿಯಾಗಿ ನೀಡಲಾಗಿದ್ದ ಮೀಸಲಾತಿ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ. ಏಕೆಂದರೆ ಸರಿಯಾಗಿ ಒಂದು ತಿಂಗಳ ಹಿಂದೆ (ಮಾ.24) ರಂದು ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆ ಕರೆದಿತ್ತು. ಈ ವೇಳೆ ಅನೇಕ ವಿಚಾರಗಳನ್ನು ಚರ್ಚಿಸಲಾಗಿತ್ತು. ಇದರಲ್ಲಿ ಪ್ರಮುಖವಾಗಿ ಪ್ರಬಲ ಎರಡು ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ನೀಡುವ ವಿಚಾರವಾಗಿ ಚರ್ಚೆ ನಡೆದಿತ್ತು. ಈ ಸಭೆಯಲ್ಲಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗಿದ್ದ ಶೇ4 ರಷ್ಟು ಮೀಸಲಾತಿಯನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ತಲಾ ಶೇ 2ರಂತೆ ಸಮವಾಗಿ ಹಂಚಲಾಗಿತ್ತು. ನಂತರ ಮುಸ್ಲಿಮರನ್ನು ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಿ, 2ಬಿಯನ್ನು ರದ್ದುಗೊಳಿಸಿತ್ತು.

ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿತ್ತು. ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿತ್ತು. ಆದರೆ ಅವರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿತ್ತು.

Leave a Reply

Your email address will not be published. Required fields are marked *