Share this news

ಮೂಡಬಿದಿರೆ : ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಫಲವಾಗಿ ನಾವು ಇಂದು ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ . ಪ್ರಾಣದ ಹಂಗು ತೊರೆದು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಬಲಿದಾನ ನೀಡಿದವರನ್ನು ನಾವು ಸದಾ ಸ್ಮರಿಸಬೇಕು ಎಂದು ಮೂಡುಬಿದಿರೆ ತಹಶೀಲ್ದಾರ್ ಪುಟ್ಟರಾಜು ಹೇಳಿದರು.
ಅವರು ಮೂಡಬಿದಿರೆ ತಾಲೂಕು ಆಡಳಿತ ಸೌಧ ಆವರಣದಲ್ಲಿ 76ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಬಳಿಕ ಅಭಿವೃದ್ಧಿಯತ್ತ ಸಾಗುತ್ತಿದೆ. ಮುಂದಿನ ಆರು ತಿಂಗಳಿನಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ವ್ಯವಸ್ಥೆಗಳನ್ನು ಮಾಡಿ ಮೂಡುಬಿದಿರೆಯನ್ನು ಜಿಲ್ಲೆಯ ಮಾದರಿ ತಾಲೂಕನ್ನಾಗಿ ಮಾಡುವ ಗುರಿ ಹೊಂದಿದ್ದೇನೆ ಎಂದರು.

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಈಗಾಗಲೇ ಯೋಜನೆ ರೂಪಿಸಿದ್ದು ಶೀಘ್ರವೇ ಅನುಷ್ಠಾನಗೊಳ್ಳಲಿದೆ . ಅಭಿವೃದ್ಧಿಗೆ ನಾಗರಿಕರು, ವಿದ್ಯಾರ್ಥಿಗಳು ಸಹಕಾರ ನೀಡಬೇಕೆಂದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಬಳಿಕ ನಡೆದ ಪಥಸಂಚನದಲ್ಲಿ ಮೂಡುಬಿದಿರೆ ತಾಲೂಕು ವ್ಯಾಪ್ತಿಯ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ಎನ್ ಎಸ್ ಎಸ್, ಎನ್ ಸಿ ಸಿ, ಸ್ಕೌಟ್ ಗೈಡ್ಸ್, ಬ್ಯಾಂಡ್ ಸೆಟ್, ಪೊಲೀಸ್, ಗೃಹರಕ್ಷಕ ದಳದವರು ಭಾಗವಹಿಸಿದ್ದರು.

ವೃತ್ತ ನಿರೀಕ್ಷಕ ನಿರಂಜನ್ ಕುಮಾರ್,ಕಂದಾಯ ನಿರೀಕ್ಷಕ ಮಂಜುನಾಥ್ ಪುರಸಭಾ ಸದಸ್ಯ ರಾಜೇಶ್ ನಾಯಕ್ ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರಾಜಶ್ರೀ ಸ್ವಾಗತಿಸಿ ಶಿವ ನಾಯ್ಕ್ ವಂದಿಸಿದರು .

Leave a Reply

Your email address will not be published. Required fields are marked *