ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಚುನಾವಣಾಪೂರ್ವದಲ್ಲಿ ಘೋಷಿಸಿದ್ದ ಪಂಚ ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿಗಳನ್ನು ಈಗಾಗಲೇ ಅನುಷ್ಠಾನಗೊಳಿಸಿದ್ದು, ಇದೀಗ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಜಾರಿಗೆಗೊಳಿಸಲು ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ.
ಯುವನಿಧಿ ಯೋಜನೆ ಜಾರಿ ಕುರಿತು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದು, ಡಿಪ್ಲೋಮಾ ಹಾಗೂ ಪದವೀಧರರಿಗೆ ಮಾಸಿಕ 1,500 ರೂ.ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು ಈ ವರ್ಷದ ಡಿಸೆಂಬರ್ ನಲ್ಲಿ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಡಿಸೆಂಬರ್ ಅಂತ್ಯಕ್ಕೆ ಡಿಪ್ಲೋಮಾ, ಪದವೀಧರರಿಗೆ 1,500 ರೂ. ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು ಜಾರಿಗೆ ತರಲು ಎಲ್ಲಾ ಸಿದ್ಧತೆ ನಡೆಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
