ನವದೆಹಲಿ: ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾ. ಪಿ.ಎಸ್.ನರಸಿಂಹ ಅವರಿದ್ದ ಪೀಠ, ಇಲ್ಲಿಯವರೆಗೆ ರಾಮಸೇತು ವಿಚಾರವಾಗಿ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂಬುದನ್ನು ಗಮನಿಸಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಪಿಐಎಲ್ ವಿಚಾರಣೆಗೆ ಸಮ್ಮತಿ ನೀಡಿದೆ. ರಾಮಸೇತುವನ್ನು ರಾಷ್ಟ್ರೀಯ ಸ್ಮಾರಕವನ್ನಾಗಿ ಘೋಷಿಸುವ ಕುರಿತಾಗಿ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಜ.19ರಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ್ದರು.
ರಾಮಾಯಣದ ಕಾಲದಲ್ಲಿ ಲಂಕೆಗೆ ಹೋಗಲು ಶ್ರೀರಾಮ ನಿರ್ಮಿಸಿದ ಎನ್ನಲಾದ ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಎಂದು ಘೋಷಿಸುವ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಕಳೆದ ಜನವರಿಯಲ್ಲಿ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಈ ಮಾಹಿತಿ ನೀಡಿತ್ತು. ಇದೇ ವೇಳೆ, ಅಗತ್ಯಬಿದ್ದರೆ ನೀವು ಕೇಂದ್ರ ಸರ್ಕಾರಕ್ಕೆ ಈ ಕುರಿತು ಹೆಚ್ಚಿನ ಮಾಹಿತಿ ನೀಡಬಹುದು ಎಂದು ಸುಬ್ರಮಣಿಯನ್ ಸ್ವಾಮಿ ಅವರಿಗೆ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಪೀಠ ಹೇಳಿತ್ತು.