ಮೈಸೂರು:ರಾಜ್ಯದಲ್ಲಿ ಇನ್ನು ಮುಂದೆ ರೈತರ ಪಂಪ್ಸೆಟ್ಗಳಿಗೆ ನಿತ್ಯ 5 ಗಂಟೆ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲಿ ವಿದ್ಯುತ್ ಕೊರತೆಯಾಗಿದೆ. ಈಗ 2 ಸಾವಿರದಿಂದ 3 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಇದಕ್ಕೆ ಕಾರಣ ಬಿಜೆಪಿ ಸರ್ಕಾರದಲ್ಲಿ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ವಿದ್ಯುತ್ ಉತ್ಪಾದನಯೇ ನಡೆಯಲಿಲ್ಲ. ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಹೊರಗಡೆ ವಿದ್ಯುತ್ ಖರೀದಿ ಮಾಡಲು ಕೂಡ ನಾನು ಸೂಚನೆ ಕೊಟ್ಟಿದ್ದೇನೆ. ಸಕ್ಕರೆ ಕಾರ್ಖಾನೆಯಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕುಡಿಯುವ ನೀರು, ಮೇವಿನ ಕೊರತೆ, ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ 236 ತಾಲ್ಲೂಕುಗಳ ಪೈಕಿ 216 ತಾಲೂಕುಗಳು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿವೆ. 42 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯಿಲ್ಲ. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಬಿದ್ದರೆ ಹೊಸದಾಗಿ ಬೋರ್ ವೆಲ್ ಗಳನ್ನು ಕೊರೆಸುವಂತೆ ಸೂಚಿಸಲಾಗಿದೆ. ಮೇವಿನ ಕೊರತೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಜನರಿಗೆ ಉದ್ಯೋಗ ನೀಡಲು ಕ್ರಮ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರ ಅಗತ್ಯ ನೆರವು ನೀಡುವ ನಿರೀಕ್ಷೆಯಲ್ಲಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.