ಬೆಂಗಳೂರು: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ನಾಯಕರು ಮತ್ತೆ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದು ಮಾತ್ರವಲ್ಲದೇ ಹಾಲಿ ಬಿಜೆಪಿಯ ಕೆಲ ಪ್ರಭಾವಿ ಶಾಸಕರೂ ಕೂಡ ಕಾಂಗ್ರೆಸ್ ಸೇರಲು ಮುಂದಾಗಿದ್ದು ಬಿಜೆಪಿ ಪಾಳಯದಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ 17 ಮಂದಿ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲು ಉತ್ಸುಕರಾಗಿದ್ದಾರೆ ಎನ್ನಲಾಗುತ್ತಿದ್ದು, ಈ ಕುರಿತು ಅವರನ್ನು ಸೇರ್ಪಡೆಗೊಳಿಸಲು ಕಾಂಗ್ರೆಸ್ ಪಕ್ಷದ ವೇದಿಕೆಯಲ್ಲಿ ಚರ್ಚೆಗಳು ನಡೆದಿದೆ.

ಈ ನಡುವೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಶಿವರಾಮ್ ಹೆಬ್ಬಾರ್ ಮತ್ತೆ ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಮುಂದಾಗಿದ್ದು, ಈ ಬಗ್ಗೆ ಶೀಘ್ರದಲ್ಲೇ ತನ್ನ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಬಿಜೆಪಿಯಲ್ಲಿ ತಮಗೆ ಆಗಿರುವ ಅನ್ಯಾಯದ ಬಗ್ಗೆ ಹಿರಿಯ ನಾಯಕರಿಗೆ ತಿಳಿಸಲಾಗಿದೆ ನನ್ನ ಸೋಲನ್ನು ಸಂಭ್ರಮಿಸಲು ಹಲವು ಮಂದಿ ಬಿಜೆಪಿ ನಾಯಕರು ಸಿದ್ದರಾಗಿದ್ದರು, ಇದನ್ನು ಸಹಿಸಿಕೊಂಡು ಬಿಜೆಪಿಯಲ್ಲಿ ಇರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.











