ಕಲಬುರ್ಗಿ: ಗೋವುಗಳ ಹತ್ಯೆ ಮಾಡಿದವರ ಕೈ ಕಡಿಯಬೇಕು ಎನ್ನುವ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧದ ಕೇಸ್ ರದ್ದುಗೊಳಿಸಿ, ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠವು ಶ್ರೀರಾಮ ಸೇನೆ ಮುಖ್ಯಸ್ಥ ಮುತಾಲಿಕ್ ಅವರಿಗೆ ಬಿಗ್ ರಿಲೀಫ್ ನೀಡಿದೆ.
ಈ ಕುರಿತು ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠವು ಇಂದು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿತು. ಐಪಿಸಿ ಸೆಕ್ಷನ್ 295(ಎ) ಅಡಿಯಲ್ಲಿ ಕೇಸ್ ದಾಖಲಿಸುವ ಮುನ್ನ ಸರ್ಕಾರದ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಅದರನ್ನು ಪಾಲಿಸದೇ ಕೇಸ್ ದಾಖಲಿಸಿರುವುದು ಸರಿಯಾದ ಕ್ರಮವಲ್ಲ ಎಂಬುದಾಗಿ ಅಭಿಪ್ರಾಯಪಟ್ಟಿತು. ಈ ಮೂಲಕ ಐಪಿಸಿ ಸೆಕ್ಷನ್ 295(ಎ) ಅಡಿಯಲ್ಲಿ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಿತು.
2017ರ ಫೆಬ್ರವರಿಯಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೋವಿನ ಹತ್ಯೆ ಮಾಡಿದವರ ಕೈ ಕಡಿಯಬೇಕೆ ಎಂಬುದಾಗಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬAಧ ಬಬಲೇಶ್ವರ ಠಾಣೆಯ ಪೊಲೀಸರು ಪ್ರಮೋದ್ ಮುತಾಲಿಕ್ ವಿರುದ್ಧ ದೂರು ದಾಖಲಿಸಿಕೊಂಡಿದ್ದರು.
ಸರ್ಕಾರದ ಪೂರ್ವಾನುಮತಿ ಪಡೆದು ಐಪಿಸಿ ಸೆಕ್ಷನ್ 295(ಎ) ಅಡಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದಲ್ಲಿ ಕೇಸ್ ದಾಖಲಿಸಬೇಕಿತ್ತು. ಆದರೆ ಪೊಲೀಸರು ಸರ್ಕಾರದ ಪೂರ್ವಾನುಮತಿ ಪಡೆಯದೇ ಪ್ರಕರಣ ದಾಖಲಿಸಿದ್ದರು. ಆದ್ದರಿಂದ ನ್ಯಾಯಾಲಯವು ಈ ಕೇಸ್ ಅನ್ನು ರದ್ದುಗೊಳಿಸಿ ಆದೇಶಿಸಿದೆ