ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಕುರಿತಂತೆ ಇಂದು ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಕಳೆದ ನವೆಂಬರ್‌ನಲ್ಲಿ ಹೈಕೋರ್ಟ್ ಜಮೀರ್ ಅಹಮ್ಮದ್ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ವಜಾಗೊಳಿಸಲು ನಿರಾಕರಿಸಿತ್ತು. ಬಳಿಕ ಜಮೀರ್ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ದ್ವಿ ಸದಸ್ಯ ಪೀಠವು,ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದರು. ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ತನಿಖೆಗೆ ನೀಡಿದ್ದ ಮಧ್ಯಂತರ ತಡೆಯ ಮುಂದುವರಿಕೆಗೆ ಆದೇಶಿಸಿದೆ.
ಕಳೆದ ವರ್ಷದಲ್ಲಿ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಎಸಿಬಿ, ಇಡಿ ದಾಳಿ ಮಾಡಿತ್ತು. ಈ ವೇಳೆ ಅವರ ಆದಾಯದಲ್ಲಿ 2000% ಕ್ಕಿಂತ ಹೆಚ್ಚಿದೆ ಎಂದು ಆರೋಪಿಸಲಾಗಿತ್ತು. ಅವರು 87.44 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಜಮೀರ್ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಿದ್ದರು. ಅವರು ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣವನ್ನು ನ.20 ರಂದು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿತ್ತು.
ಈ ಹಿನ್ನಲೆ ಜಮೀರ್ ಅಹ್ಮದ್ ಖಾನ್, ಕೇಸ್ನ ತನಿಖೆಯ ರದ್ದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಈ ಮಧ್ಯೆ, ಸುಪ್ರೀಂಕೋರ್ಟ್‌ನಲ್ಲಿ ಈಗಾಗಲೇ ಮೇಲ್ಮನವಿ ಬಾಕಿ ಹಿನ್ನೆಲೆಯಲ್ಲಿ, ಹೈಕೋರ್ಟ್ ಆದೇಶ ತಡೆಹಿಡಿಯುವಂತೆ ಜಮೀರ್ ಪರ ವಕೀಲರು ಮನವಿ ಮಾಡಿದ್ದರು. ಅದರಂತೆ 30 ದಿನಗಳ ಕಾಲ ತನ್ನ ತೀರ್ಪನ್ನು ಅಮಾನತಿನಲ್ಲಿಟ್ಟು ಹೈಕೋರ್ಟ್ ಆದೇಶ ಹೊರಡಿಸಿತ್ತು.ಇಂದು ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ಆದೇಶದಲ್ಲಿ ಮಧ್ಯ ಪ್ರವೇಶವನ್ನು ನಿರಾಕರಿಸಿದೆ.