ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರವಲ್ಲ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸುವುದು ಅಥವಾ ಬಿಡುವುದು ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂಬ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿಗಳ ಕುರಿತು ನಾವು ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕೇವಲ ಸಿದ್ದರಾಮಯ್ಯ ಮಾತ್ರವಲ್ಲ. ಕೆಪಿಸಿಸಿ ಅಧ್ಯಕ್ಷರೂ ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಂಕಲ್ಪ ಮಾಡಿದ್ದೇವೆ, ಕಾಂಗ್ರೆಸ್ ಗೆಲುವು ಕೇವಲ ಒಬ್ಬ ನಾಯಕನ ಗೆಲುವಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಯತೀಂದ್ರ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖಾರವಾಗಿ ಪ್ರತಿಕ್ರಿಯಿಸಿದ್ದು, ವಿನಾಕಾರಣ ಗೊಂದಲ ಸೃಷ್ಟಿಸುವ ಪ್ರಯತ್ನ ಬೇಡ, ಈ ಕುರಿತು ಹೈಕಮಾಂಡ್ ಉತ್ತರ ಕೊಡುತ್ತದೆ ಎಂದು ಯತೀಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಕಾಂಗ್ರೆಸ್‌ನಲ್ಲಿ ಈಗ ಮತ್ತೆ ‘ಪೂರ್ಣಾವಧಿ ಸಿಎಂ’ ವಿವಾದ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗಳಿಸಿದರೆ ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲಿ ಕೋಲಾಹಲವನ್ನು ಸೃಷ್ಟಿಸಿದೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ