ಬೆಂಗಳೂರು: ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ವಿವಿಧ ಕಾರ್ಯಕ್ಕಾಗಿ ನಿಗದಿ ಮಾಡಲಾಗಿದ್ದ ಅನುದಾನ ಬಿಡುಗಡೆಗೆ ತಡೆ ನೀಡುವ ಕುರಿತಂತೆ ಸರ್ಕಾರ ಹೊರಡಿಸಿದ್ದ ಆದೇಶವನ್ನು ಶುಕ್ರವಾರ ಹಿಂಪಡೆಯಲಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇವಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರಗಳಿಗೆ ಸರ್ಕಾರದಿಂದ 142 ಕೋಟಿ ರೂ ಅನುದಾನ ಘೋಷಿಸಲಾಗಿತ್ತು. ಆ ಅನುದಾನದಲ್ಲಿ 50ಕ್ಕೂ ಹೆಚ್ಚಿನ ದೇವಸ್ಥಾನಗಳು ಮತ್ತು 150ಕ್ಕೂ ಹೆಚ್ಚಿನ ಮಠಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಅನುದಾನ ಘೋಷಣೆಯಾಗಿರುವ ದೇವಸ್ಥಾನಗಳಲ್ಲಿ ಇನ್ನೂ ಅಭಿವೃದ್ಧಿ ಕಾರ್ಯ ಆರಂಭವಾಗದಿದ್ದರೆ ಅನುದಾನ ಬಿಡುಗಡೆ ಮಾಡದೆ ತಡೆ ಹಿಡಿಯುವಂತೆ ಮುಜರಾಯಿ ಇಲಾಖೆ ಆಯುಕ್ತರು ಆಗಸ್ಟ್ 14ರಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆದೇಶಿಸಿದ್ದರು. ಈ ಕ್ರಮದ ವಿರುದ್ಧ ಧಾರ್ಮಿಕ ಮುಖಂಡರು ಹಾಗೂ ಭಕ್ತಾಧಿಗಳಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಣಿದ ಸರ್ಕಾರ, ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಮುಜರಾಯಿ ಇಲಾಖೆ ಆಯುಕ್ತರು ಹಿಂಪಡೆದಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಮುಜರಾಯಿ ಇಲಾಖೆ ಆಯುಕ್ತರ ಆದೇಶ ಗೊಂದಲಕ್ಕೆ ಕಾರಣವಾಗಿದೆ. ದೇವಸ್ಥಾನಗಳಿಗೆ ಮತ್ತು ಮಠಗಳಿಗೆ ಅನುದಾನವನ್ನು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಹಿಂದೆ ಹೊರಡಿಸಿದ್ದ ಆದೇಶ ಹಿಂಪಡೆಯಲು ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚಿಸಲಾಗಿದ್ದು, ಹಿಂದಿನ ಆದೇಶಕ್ಕೆ ತಡೆ ನೀಡಲಾಗಿದೆ ಎಂದು ತಿಳಿಸಿದರು.









