ಉಡುಪಿ: ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಕರಾವಳಿ ಭಾಗದಲ್ಲಿ ಶಾಲಾ ಮಕ್ಕಳ್ಳಿಗಾಗಿ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಉಡುಪಿ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಸುತ್ತೋಲೆ ಪ್ರಕಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ಮಕ್ಕಳು ಹೊರಾಂಗಣದಲ್ಲಿ ಆಟ ಆಡುವುದನ್ನು ನಿರ್ಬಂಧಿಸಲಾಗಿದೆ. ವಿದ್ಯಾರ್ಥಿಗಳು ಹೆಚ್ಚು ನೀರು ಕುಡಿಯಬೇಕು ಮತ್ತು ಸೂರ್ಯನ ಕಿರಣಗಳಿಗೆ ನೇರವಾಗಿ ಮೈಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲೆಯ ಬಿಇಒಗಳ ಮೂಲಕ ಎಲ್ಲಾ ಶಾಲೆಗಳಿಗೆ ನಿರ್ದೇಶನ ನೀಡಿದೆ. ಶಾಲಾ ಮಕ್ಕಳಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಶಾಲಾ ಮುಖ್ಯಸ್ಥರು, ಶಿಕ್ಷಕರು ಹಾಗೂ ಪಾಲಕರಿಗೆ ಸೂಚಿಸಲಾಗಿದೆ.
ಇನ್ನು ಕೆಲವೆಡೆ ಪರೀಕ್ಷೆಗಳು ಆರಂಭವಾಗಿದ್ದು, ಮಕ್ಕಳು ಹೈಡ್ರೇಟ್ ಆಗಿರುವುದು ಬಹಳ ಮುಖ್ಯ. ಮಧ್ಯಾಹ್ನದ ಬಿಸಿ ಊಟವನ್ನು ತಯಾರಿಸುವಾಗ ಸರಿಯಾದ ವಾತಾವರಣ ವ್ಯವಸ್ಥೆ ಮಾಡಲು ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಇನ್ನು ಕ್ರಮಕೈಗೊಂಡ ಬಗ್ಗೆ ವರದಿ ಸಲ್ಲಿಸುವಂತೆ ಇಲಾಖೆಯೂ ಶಾಲೆಗಳಿಗೆ ತಿಳಿಸಿದೆ.
