ಬೆಂಗಳೂರು : ಹೈಕೋರ್ಟ್ ಆದೇಶದಂತೆ ತಂದೆಯ ಆದಾಯ ಪ್ರಮಾಣ ಪತ್ರ ನೀಡಿರುವ ಅಭ್ಯರ್ಥಿಗಳನ್ನೂ ಪರಿಗಣಿಸಿ ಇನ್ನೊಂದು ವಾರದಲ್ಲಿ 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರು, ಈ ಮೊದಲು ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಭ್ಯರ್ಥಿಗಳ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್ , ವಿವಾಹಿತ ಮಹಿಳೆಯರು ಸಲ್ಲಿಸಿರುವ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ಮುಂದುವರೆಸುವಂತೆ ಆದೇಶದಲ್ಲಿ ತಿಳಿಸಿತ್ತು.
ಈ ಕುರಿತು ಮುಖ್ಯ ಕಾರ್ಯದರ್ಶಿಯವರು, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿಪರಿಷ್ಕರಿಸಲು ತೀರ್ಮಾನಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ಹೊಸ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.