

ಬೆಂಗಳೂರು,ಸೆ..22: ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದ್ದ 108 ಆ್ಯಂಬುಲೆನ್ಸ್ ನೌಕರರ ತಾಳ್ಮೆಯ ಕಟ್ಟೆಯೊಡೆದಿದೆ. ನಿಗದಿತ ಗಡುವು ಮುಕ್ತಾಯಗೊಂಡರೂ ಆರೋಗ್ಯ ಇಲಾಖೆ ಹಾಗೂ ಸರ್ಕಾರದಿಂದ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ನೌಕರರು ಆ್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸುವ ನಿರ್ಧಾರಕ್ಕೆ ಮುಂದಾಗಿದ್ದಾರೆ.108 ಆ್ಯಂಬುಲೆನ್ಸ್ ಸೇವೆ ಸ್ಥಗಿತಗೊಂಡರೆ ರೋಗಿಗಳು ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ.
ಇಂದು ಸಂಜೆ ವೇಳೆಗೆ ತಮ್ಮ ಬೇಡಿಕೆಗಳ ಕುರಿತು ಸರ್ಕಾರ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ, ರಾತ್ರಿ 8 ಗಂಟೆ ಬಳಿಕ 108 ಆ್ಯಂಬುಲೆನ್ಸ್ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಾಗಿ ನೌಕರರು ಎಚ್ಚರಿಸಿದ್ದಾರೆ. ಇದರೊಂದಿಗೆ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ನಿರ್ಧಾರವನ್ನೂ ಸಿಬ್ಬಂದಿ ಕೈಗೊಂಡಿದ್ದಾರೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತುರ್ತು ಆರೋಗ್ಯ ಸೇವೆಯ ಮೇಲೆ ಪರಿಣಾಮ ಬೀರುವ ಆತಂಕವೂ ಎದುರಾಗಿದೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ನೌಕರರ ಸಮಸ್ಯೆಗಳನ್ನು ಬಗೆಹರಿಸಬೇಕು. ಸೇವೆಗೆ ಯಾವುದೇ ರೀತಿಯ ಅಡ್ಡಿಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಬ್ಬಂದಿ ಒತ್ತಾಯಿಸಿದ್ದಾರೆ.
ಪ್ರಮುಖ ಬೇಡಿಕೆಗಳೇನು?
ವಲಯವಾರು ವೇತನ ನಿಗದಿ ಪದ್ಧತಿ ರದ್ದುಗೊಳಿಸಿ ಏಕರೂಪ ವೇತನ ಜಾರಿಗೊಳಿಸಬೇಕು ಹಾಗೂ ಪ್ರತೀವರ್ಷ ವಾರ್ಷಿಕ ವೇತನ ಹೆಚ್ಚಳದೊಂದಿಗೆ ವೇತನ ಪರಿಷ್ಕರಣೆ ಮಾಡಬೇಕು.ಸಿಬ್ಬಂದಿಯ ಜೇಷ್ಠತೆಯ ಆಧಾರದ ಮೇಲೆ ವೇತನ ನಿಗದಿ ಮಾಡಬೇಕು ಹಾಗೂ ಕಾರ್ಮಿಕ ಇಲಾಖೆಯ ನಿಯಮಾವಳಿಗಳಂತೆ ಪ್ರತಿ ತಿಂಗಳ 7ನೇ ತಾರೀಖಿನೊಳಗೆ ವೇತನ ಪಾವತಿಯಾಗುವ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. :ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸವ ಸಿಬ್ಬಂದಿಗಳಿಗೆ ಸೂಕ್ತ ವಿಶ್ರಾಂತಿ ಕೊಠಡಿ ಹಾಗೂ ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು. ಕರ್ತವ್ಯದ ವೇಳೆ ಅಪಘಾತ ಸಂಭವಿಸಿ ಸಿಬ್ಬಂದಿ ಮೃತಪಟ್ಟರೆ ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು ಎಂಬ ಬೇಡಿಕೆಯನ್ನೂ ನೌಕರರು ಮುಂದಿಟ್ಟಿದ್ದಾರೆ. ಇದರ ಜೊತೆಗೆ ಸಿಬ್ಬಂದಿಗೆ ಸೂಕ್ತ ವಿಶ್ರಾಂತಿ ಕೊಠಡಿಗಳ ವ್ಯವಸ್ಥೆ ಮಾಡಬೇಕು ಹಾಗೂ ಕರ್ತವ್ಯದ ಶಿಫ್ಟ್ ಸಮಯವನ್ನು ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬೇಕು. ಬೇಡಿಕೆ ಈಡೇರದಿದ್ದರೆ ಇಂದು ರಾತ್ರಿ 8 ಗಂಟೆಯಿAದ ಸೇವೆ ಸ್ಥಗಿತಗೊಳಿಸುವುದರ ಜೊತೆಗೆ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಹೋರಾಟ ಮುಂದುವರಿಸುವುದಾಗಿ ನೌಕರರು ಎಚ್ಚರಿಕೆ ನೀಡಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
