Share this news

ಬೆಂಗಳೂರು: ಸಿವಿಲ್ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ನೀಡಲಾಗುತ್ತಿರುವ ಶೇ 2 ರ ಮೀಸಲಾತಿಗೆ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿದೆ. ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮ 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಕ್ರೀಡಾ ಸಾಧಕರಿಗೆ ಶೇ 2 ರ ಮೀಸಲಾತಿ ನೀಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದೀಗ ತಾತ್ಕಾಲಿಕ ತಡೆ ನೀಡಿ ಸುತ್ತೋಲೆ ಹೊರಡಿಸಿದೆ.

ದಿನಾಂಕ 18.09.2024 ರ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 295 ಸೇನೆನಿ 2023ರಲ್ಲಿ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿ ಸದರಿ ನಿಯಮದ ಉಪ-ನಿಯಮ (1) ಖಂಡ (1ಆ) ನಂತರ (1ಇ) ಯನ್ನು ಸೇರ್ವಡೆಗೊಳಿಸಿ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ವಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಿಂದಲೂ ಎಲ್ಲಾ ಇಲಾಖೆಗಳ ಮಂಜೂರಾದ ವೃ0ದ ಬಲದಲ್ಲಿ ಶೇಕಡ 2 ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕರಿಗೆ ಮೀಸಲಿರಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಆದರೆ, ಸರ್ಕಾರವು ಸೆಪ್ಟೆಂಬರ್ 18 ರ ಅಧಿಸೂಚನೆಯನ್ವಯ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸಲಾಗುತ್ತಿದೆ. ಆದುದರಿಂದ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2 ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ 18.09.2024ರ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಸರ್ಕಾರ ತಿಳಿಸಿದೆ.

 

Leave a Reply

Your email address will not be published. Required fields are marked *