ಮಂಗಳೂರು : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಗಡಿಯಾರ ಸರ್ಕಾರಿ ಶಾಲೆಯ ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ.
ಬಿ.ಸಿ.ರೋಡು – ಅಡ್ಡಹೊಳೆ ಚತುಷ್ಪತ ಹೆದ್ದಾರಿ ಕಾಮಗಾರಿ ನಡೆಯುವ ವೇಳೆ ಶಾಲೆಯ ಕಟ್ಟಡದ ಬದಿವರೆಗೆ ಅಗೆಯಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ಮಣ್ಣು ಅಗೆದ ಪರಿಣಾಮವಾಗಿ ಇದೀಗ ಗುಡ್ಡ ಕುಸಿಯಲು ಆರಂಭಿಸಿದೆ. ಗುಡ್ಡ ಕುಸಿತದಿಂದಾಗಿ ಶಾಲೆಯ ಬಳಿ ನಿರ್ಮಿಸಲಾಗಿರುವ ವಿದ್ಯುತ್ ಸ್ಥಾವರ ಘಟಕವು ಅಪಾಯಕಾರಿ ಸ್ಥಿತಿಯಲ್ಲಿದ್ದು, ಕುಸಿಯುವ ಭೀತಿ ಉಂಟಾಗಿದೆ. ಇದಕ್ಕೆ ಸಾರ್ವಜನಿಕರಿಂದ ತೀವೃ ಆಕ್ರೋಶ ವ್ಯಕ್ತವಾಗಿದ್ದು, ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ನಡುವೆ ನಿನ್ನೆ ಶಾಲೆಗೆ ರಜೆ ಘೋಷಣೆ ಮಾಡಲಾಗಿತ್ತು.
ಅಪಾಯದ ಹಂತದಲ್ಲಿರುವ ಈ ಸರ್ಕಾರಿ ಶಾಲೆ ಹಾಗೂ ವಿದ್ಯುತ್ ಟವರ್ ಸ್ಥಳಕ್ಕೆ ತಹಸೀಲ್ದಾರ್ ಬಿ.ಎಸ್. ಕೂಡ್ಲಿಗಿ, ಬಿ.ಇ.ಒ. ಜ್ಞಾನೇಶ್ ಹಾಗೂ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ. ಕಂಪನಿಯ ಪ್ರಮುಖರು ಭೇಟಿ ನೀಡಿ ತಡೆಗೋಡೆ ನಿರ್ಮಿಸುವುದಾಗಿ ಭರವಸೆ ನೀಡಿದ್ದಾರೆ. ಸ್ಥಳದಲ್ಲಿ ಗುಡ್ಡ ಜರಿತದಿಂದ ಮುಂದೆ ಸಂಭವಿಸಬಹುದಾದ ಅಪಾಯದ ಬಗ್ಗೆ ಮಾಹಿತಿ ಪಡೆದ ಬಳಿಕ ಶಾಲಾ ಮುಖ್ಯೋಪಾಧ್ಯಾಯ ಸದಾನಂದ ಟಿ.ಎಂ. ಮತ್ತು ಗ್ರಾಮಸ್ಥರು ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಸಮಸ್ಯೆ ಪರಿಹಾರ ಕಂಡುಕೊಳ್ಳುವ ತೀರ್ಮಾನ ತೆಗೆದುಕೊಂಡರು.