ಬೆಂಗಳೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಶುಭ ಹಾರೈಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಕನ್ನಡದಲ್ಲೇ ಸಂದೇಶ ಪ್ರಕಟಿಸುವ ಅವರು ಕರ್ನಾಟಕದ ಜತೆ ಸದಾ ಸಂತೋಷ, ಯಶಸ್ಸು ಗಳಿಸುವಂತಾಗಲಿ ಎಂದು ಹಾರೈಸಿದ್ದಾರೆ.
ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ’ ಎಂದು ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.
ರಾಜ್ಯಾದ್ಯಂತ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ನಾಡಿನ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಾಡಭಾಷೆ ಕನ್ನಡ ಆಡು ಭಾಷೆ, ಅನ್ನದ ಭಾಷೆಯಾಗಲಿ. ನಿತ್ಯ ಬದುಕಿನಲ್ಲಿ ಹೆಚ್ಚೆಚ್ಚು ಕನ್ನಡ ಭಾಷೆಯನ್ನು ಬಳಸೋಣ, ಆ ಮೂಲಕ ಕನ್ನಡವನ್ನು ಬೆಳೆಸೋಣ. “ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ” ಎಂದು ಶುಭ ಕೋರಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ಡಿಸಿಎಂ ಡಿಕೆ ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಸಿಎಸ್ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.