ಬೆಳಗಾವಿ: ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಉಡುಪಿ, ವಿಜಯನಗರ, ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು ಎಂದು ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.
ಬೆಳಗಾವಿ ಸುವರ್ಣಸೌಧ ಸಭಾಂಗಣದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗಮಟ್ಟದ ಸಭೆ ನಡೆಸಿ ಮಾತನಾಡಿದ ಅವರು, ಕೃಷಿಕರಿಗೆ ಯೋಜಿತ ತರಬೇತಿ ನೀಡಿ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮ ವಹಿಸಲಾಗುತ್ತಿದೆ. ಸ್ಥಳೀಯವಾಗಿ ಬೀಜೋತ್ಪಾದನೆ ಮಾಡಿ ಪ್ರತಿ ಸಾಲಿನಲ್ಲಿ ಜಿಲ್ಲೆಗೆ ಅವಶ್ಯವಿರುವ ಬಿತ್ತನೆ ಬೀಜವನ್ನು ಆಯಾ ಜಿಲ್ಲೆಗಳ ಬೀಜೋತ್ಪಾದನಾ ಕೇಂದ್ರ ಮತ್ತು ಪ್ರಗತಿಪರ ರೈತರ ಹೊಲದಲ್ಲೇ ಉತ್ಪಾದಿಸಬೇಕು. ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ, ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಬಿತ್ತನೆ ಬೀಜ, ರಸಗೊಬ್ಬರಗಳನ್ನು ಬೇಡಿಕೆಗಿಂತಲೂ ಹೆಚ್ಚು ಸರಬರಾಜು ಮಾಡಲಾಗಿದೆ ಎಂದರು.
ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನಗ ಬಗ್ಗೆ ಅರಿವು ಮೂಡಿಸಿ, ಕೃಷಿ ಜಮೀನುಗಳಿಗೆ ಅವುಗಳನ್ನು ವರ್ಗಾವಣೆ ಮಾಡಬೇಕು. ಬೆಳೆ ವಿಮೆ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ನೋಂದಣಿ ಜಾಸ್ತಿ ಮಾಡಿ, ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಗಮನ ಹರಿಸಬೇಕು.
ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಬೇಕು. ಹೈಟೆಕ್ ಹಾರ್ವೆಸ್ಟ್ ಹಬ್, ಕೃಷಿ ನವೋದ್ಯಮಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದರಿಂದಾಗುವ ಪರಿಣಾಮಕಾರಿ ಬದಲಾವಣೆಗಳ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡಿ. ಸುಸ್ಥಿರ, ಸಮಗ್ರ ಕೃಷಿ ಬಗ್ಗೆ ತರಬೇತಿ, ಮಾರ್ಗದರ್ಶನ ನೀಡಿ ಬಜೆಟ್ನಲ್ಲಿ ಘೋಷಿಸಿರುವ ಎಲ್ಲ ಯೋಜನೆಗಳನ್ನು ಶೀಘ್ರದಲ್ಲೇ ಅನುಷ್ಠಾನಗೊಳಿಸಬೇಕು ಎಂದರು.