ಬೆಂಗಳೂರು: ಬಿಲ್ಲವ ಸಮುದಾಯದ ಅಭಿವೃದ್ಧಿಗಾಗಿ ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ರಾಜ್ಯದ ಹಿಂದುಳಿದ ಜಾತಿಗಳ ಪೈಕಿ ಒಂದಾಗಿರುವ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಸಾರಕ್ಕೆ ಪ್ರತ್ಯೇ ಕ ನಿಗಮ ಸ್ಥಾಪನೆ ಮಾಡಬೇಕೆಂಬುದು ಸಮುದಾಯದ ಬಹುಕಾಲದ ಬೇಡಿಕೆಯಾಗಿತ್ತು. ಸಮುದಾಯದ ಈ ಬೇಡಿಕೆ ಈಡೇರಿಕೆಗಾಗಿ ಕೆಲ ದಿನಗಳ ಹಿಂದಷ್ಟೇ ಸ್ವಾಮೀಜಿಗಳು ಮತ್ತು ಸಮುದಾಯದ ಮುಖಂಡರ ಜತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ನಿಗಮ ಸ್ಥಾಪನೆಗೆ ಮನವಿ ಸಲ್ಲಿಸಲಾಗಿತ್ತು.
ಮನವಿ ಸ್ವೀಕರಿಸಿದ ಸಿಎಂ ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದು, ಇದೀಗ ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಇಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದು, ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸ್ಪಂದಿಸುವ ಮೂಲಕ ನುಡಿದಂತೆ ನಡೆದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.