ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ -2022ರ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ 1:1 ಆಯ್ಕೆ ಪಟ್ಟಿಯು ಇಲಾಖೆಯ ವೆಬ್‌ಸೈಟ್‌ನಲ್ಲಿ ಸದ್ಯ ಲಭ್ಯವಿದೆ.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದಲ್ಲಿ ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಿತ್ತು. ಆದರೆ ಇತರೆ ಹಿಂದುಳಿದ ವರ್ಗಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಂಬಂಧ ಇಲಾಖೆಯ ನಿಯಮ ಗೊಂದಲಕ್ಕೆ ಕಾರಣವಾಗಿದ್ದ ಹಿನ್ನಲೆ ಒಂದಷ್ಟು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪರಿಣಾಮ, ಜನವರಿ 30ರಂದು ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಲಾಗಿತ್ತು. ಸದ್ಯ ಮುಖ್ಯ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.