ದಕ್ಷಿಣಕನ್ನಡ : ದಕಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ 2 ಕಿ.ಮೀ. ಪ್ರದೇಶದಲ್ಲಿ ಧಾರ್ಮಿಕ ಕಾರ್ಯಗಳಿಗೆ ಕಾಯ್ದಿರಿಸುವ ನಿಟ್ಟಿನಲ್ಲಿ ಗಣಿಗಾರಿಕೆ ಚಟುವಟಿಕೆ ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನ ಪಾವಿತ್ರ‍್ಯತೆ ಕಾಪಾಡುವ ನಿಟ್ಟಿನಲ್ಲಿ ಈ ಪ್ರದೇಶದಲ್ಲಿ ಗಣಿಗಾರಿಕೆ ಮತ್ತು ಕಲ್ಲುಪುಡಿ ಚಟುವಟಿಕೆ ಹೆಚ್ಚಾಗಿದ್ದು ಇದನ್ನು ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಕಾರಿಂಜ ಕ್ಷೇತ್ರದ ದೇವಸ್ಥಾನದ ರಕ್ಷಣೆ ಮಾಡುವ ಸಲುವಾಗಿ ಹಿಂದೂ ಜಾಗರಣ ವೇದಿಕೆ ಸರ್ಕಾರಕ್ಕೆ ಮನವಿ ಮಾಡಿತ್ತು.

ಕಾರಿಂಜ ಕ್ಷೇತ್ರದ ದೇವಸ್ಥಾನ ಪಾವಿತ್ರ‍್ಯತೆಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲು ಶಾಸಕ ರಾಜೇಶ್ ಉಳಿಪ್ಪಾಡಿಗುತ್ತು ಹೋರಾಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್‌ರನ್ನು ಕ್ಷೇತ್ರಕ್ಕೆ ಕರೆಸಿ, ಗಣಿಗಾರಿಕೆ ನಿಷೇಧ ಪ್ರದೇಶವೆಂದು ಘೋಷಿಸುವಂತೆ ಸರಕಾರಕ್ಕೆ ಒತ್ತಡ ಹಾಕುವಂತೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಯವರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ , ಕಾರಿಂಜ ದೇವಸ್ಥಾನದ ಸುತ್ತಮುತ್ತ 2 ಕಿ.ಮೀ. ವ್ಯಾಪ್ತಿಯನ್ನು ಗಣಿಗಾರಿಕೆ ಚಟುವಟಿಕೆ ನಿಷೇಧಿತ ಪ್ರದೇಶವೆಂದು ಘೋಷಿಸುವಂತೆ ಮನವಿ ಮಾಡಿದ್ದರು.
ಗಣಿಗಾರಿಕೆ ನಿಷೇಧಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲು ದ.ಕ. ಜಿಲ್ಲಾಧಿಕಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ಸಹಾಯಕ ಕಮಿಷನರ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರ ಮೂಲಕ ದೇವಸ್ಥಾನದ ಸುತ್ತಮುತ್ತ ಜಂಟಿ ಸ್ಥಳ ಪರಿಶೀಲನೆ ಮಾಡಲಾಗಿದೆ. ಇದೀಗ ಮುಂದಿನ ಆದೇಶದವರೆಗೆ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನ 2 ಕಿ.ಮೀ. ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಕಾರ್ಯಗಳಿಗೆ ಕಾಯ್ದಿರಿಸುವ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
