ಬೆಂಗಳೂರು : ಯಾವುದೇ ಕ್ಷಣದಲ್ಲಿ ಚುನಾವಣಾ ವೇಳಾಪಟ್ಟಿ ಘೋಷಣೆ ಮಾಡುವ ಸಾಧ್ಯತೆಯಿದ್ದು, ತುರ್ತು ಕಾರ್ಯಗಳನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗವು ಪತ್ರ ಬರೆದಿದೆ. ಹೀಗಾಗಿ ಕರ್ನಾಟಕ ವಿಧಾನಸಭೆ ಚುನಾವಣೆ 2023 ಘೋಷಣೆ ಆದ ಕೂಡಲೇ ಅಗತ್ಯವಾಗಿ ಮತ್ತು ತುರ್ತಾಗಿ ಬಿಬಿಎಂಪಿ ಮತ್ತು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳೊಂದಿಗೆ ಸನ್ನದ್ಧರಾಗಿರಬೇಕು ಎಂಬ ಸೂಚನೆ ಸಂಬಂಧಪಟ್ಟ ಸ್ಥಳೀಯಾಡಳಿತ ಸಂಸ್ಥೆಗಳ ಉನ್ನತಾಧಿಕಾರಿಗಳಿಗೆ ರವಾನೆ ಆಗಿದೆ.
ವಿಧಾನಸಭೆಯ ಚುನಾವಣೆಗೆ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಸಂಪೂರ್ಣ ಸಿದ್ಧತೆಗಳನ್ನು ಈಗಾಲೇ ಕೈಗೊಂಡಿದ್ದು, ಬಹುತೇಕ ಇದೇ ತಿಂಗಳ ಕೊನೆಯ ವಾರದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಮೇ 2ನೇ ವಾರ ಚುನಾವಣೆ ನಡೆವ ನಿರೀಕ್ಷೆಯಿದೆ.
ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ರಾಜ್ಯ ಮುಖ್ಯಚುನಾವಣಾಧಿಕಾರಿ ಕಚೇರಿಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಅಲ್ಲದೇ, ಇತ್ತೀಚೆಗಷ್ಟೇ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ರಾಜ್ಯಕ್ಕೆ ಆಗಮಿಸಿ ಮೂರು ದಿನಗಳ ಸಿದ್ಧತೆಗಳ ಕುರಿತು ಸಂಪೂರ್ಣವಾಗಿ ಪರಿಶೀಲನೆ ನಡೆಸಿದೆ. ದೆಹಲಿಯಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿ ದಿನಾಂಕವನ್ನು ಅಂತಿಮಗೊಳಿಸುವ ಕಾರ್ಯ ನಡೆಯುತ್ತಿದ್ದು, ಇದೇ ತಿಂಗಳ ಕೊನೆಯ ವಾರದಲ್ಲಿ ಅಥವಾ ಏಪ್ರಿಲ್‌ನ ಮೊದಲ ವಾರದಲ್ಲಿ ಅಧಿಕೃತವಾಗಿ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ ಎಂದು ಮೂಲಗಳು ಹೇಳಿವೆ.