ನವದೆಹಲಿ: ಮುಂದಿನ ಆರು ತಿಂಗಳುಗಳಲ್ಲಿ ದೇಶದ ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾಗಳು ಇರುವುದಿಲ್ಲ, ಬದಲಿಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಭಾರತೀಯ ಕೈಗಾರಿಕೆಗಳ ಒಕ್ಕೂಟ (CII) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಟೋಲ್ ಸಂಗ್ರಹ ಆದಾಯ 40,000 ಕೋಟಿ ರೂ. ಇದ್ದು ಮುಂದಿನ 2-3 ವರ್ಷಗಳಲ್ಲಿ 1.40 ಲಕ್ಷ ಕೋಟಿ ತಲುಪುವ ನಿರೀಕ್ಷೆ ಇದೆ .ಟೋಲ್ ಪ್ಲಾಜಾಗಳ ಬಳಿ ಸಂಚಾರ ದಟ್ಟಣೆ ತಡೆಯಲು ಮತ್ತು ಪ್ರಯಾಣಿಸಿದ ದೂರಕ್ಕೆ ಮಾತ್ರ ಟೋಲ್ ಸಂಗ್ರಹಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ದೇಶದಲ್ಲಿ ಟೋಲ್ ಪ್ಲಾಜಾಗಳ ಬದಲಿಗೆ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಸೇರಿದಂತೆ ಹೊಸ ತಂತ್ರಜ್ಞಾನಗಳ ಅಳವಡಿಕೆನ್ನು ಸರ್ಕಾರ ಎದುರು ನೋಡುತ್ತಿದೆ. ಆರು ತಿಂಗಳಲ್ಲಿ ಹೊಸ ತಂತ್ರಜ್ಞಾನ ಅಳವಡಿಸಲಿದ್ದೇವೆ ಎಂದು ಅವರು ಹೇಳಿದರು.
ವಾಹನಗಳನ್ನು ನಿಲ್ಲಿಸದೆ ಸ್ವಯಂಚಾಲಿತ ಟೋಲ್ ಸಂಗ್ರಹ ಆಗುವಂತೆ ಮಾಡಲು ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ವ್ಯವಸ್ಥೆ (ಸ್ವಯಂಚಾಲಿತ ನಂಬರ್ ಪ್ಲೇಟ್ ರೀಡರ್ ಕ್ಯಾಮೆರಾಗಳು) ಯೋಜನೆಯನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಪ್ರಾಯೋಗಿಕವಾಗಿ ಹಮ್ಮಿಕೊಂಡಿದೆ. ಇದರ ಯಶಸ್ಸನ್ನು ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.