ಕಾರ್ಕಳ: ಕಾರ್ಕಳದಿಂದ ಕಡ್ತಲ ಕಡೆಗೆ ಸಾಗುತಿದ್ದ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಹಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಬಂಗ್ಲೆಗುಡ್ಡೆ ಬಳಿ ಗುರುವಾರ ನಡೆದಿದೆ.
ಕಾರ್ಕಳದ ಖಾಸಗಿ ಆಸ್ಪತ್ರೆಗೆ ಸೇರಿದ ಅಂಬುಲೆನ್ಸ್ ವೇಗವಾಗಿ ಹೋಗುತ್ತಿದ್ದಾಗ ಮುಂದಿನಿಂದ ಹೋಗುತ್ತಿದ್ದ ಬೈಕ್ ಸವಾರನಿಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆ ಪಡೆದುಕೊಂಡ ವ್ಯಕ್ತಿಯನ್ನು ಕಡ್ತಲಕ್ಕೆ ಕರೆದೊಯ್ಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಅಂಬುಲೆನ್ಸ್ ಒಳಗಿದ್ದ ರೋಗಿಗಳಿಗೆ ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ.