ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಉದಯ ಶೆಟ್ಟಿ ಹೆಸರು ಘೋಷಣೆಯಾದ ಬೆನ್ನಲ್ಲೇ ಇದೀಗ ಕಾರ್ಕಳ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ.
ಈ ಕುರಿತು ಉಡುಪಿ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಸಹಕಾರಿ ಕ್ಷೇತ್ರದ ಭ್ರಷ್ಟನ ಮಾತುಕೇಳಿ ಕಾರ್ಕಳದಲ್ಲಿ ಭ್ರಷ್ಟನಿಗೆ ಟಿಕೆಟ್ ನೀಡಲಾಗಿದೆ, 2 ಕೋಟಿಗೆ ಟಿಕೆಟ್ ಮಾರಾಟವಾಗಿದ್ದು,ಹಣದಾಸೆಗೆ ರಾಜ್ಯದಲ್ಲಿ ಡಿಕೆ ಶಿವಕುಮಾರ್ ಹಾಗೂ ಉಡುಪಿಯಲ್ಲಿ ಸೊರಕೆಯವರು ಕಾಂಗ್ರೆಸ್ ಪಕ್ಷವನ್ನು ನಾಶ ಮಾಡಲು ಹೊರಟಿದ್ದಾರೆ ಎಂದು ತೀವೃ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಜತೆ ಹೊಂದಾಣಿಕೆ ರಾಜಕೀಯ ಮಾಡಿಕೊಂಡು ಬಂದ ಉದಯ ಶೆಟ್ಟಿಯವರಿಗೆ ಟಿಕೆಟ್ ಕೊಟ್ಟು ಭ್ರಷ್ಟ ಬಿಜೆಪಿಯ ವಿರುದ್ಧ ನಿರಂತರ ಹೋರಾಟ ಮಾಡಿಕೊಂಡು ಬಂದಿರುವ ನನ್ನಂತಹ ಪ್ರಾಮಾಣಿಕ ಕಾರ್ಯಕರ್ತನಿಗೆ ಟಿಕೆಟ್ ನಿರಾಕರಿಸಿರುವುದು ತೀವೃ ಆಘಾತ ತಂದಿದೆ ಎಂದು ಮಂಜುನಾಥ ಪೂಜಾರಿ ಭಾವುಕರಾಗಿ ನುಡಿದರು.
ಉದಯ ಶೆಟ್ಟಿ ಬಿಜೆಪಿಯ ಏಜೆಂಟ್ ರೀತಿ ವರ್ತಿಸುತ್ತಿದ್ದು ಕಾಮಗಾರಿ ಗುತ್ತಿಗೆ ಪಡೆಯಲು ಬಿಜೆಪಿ ನಾಯಕರ ಜತೆ ಒಳ ಒಪ್ಪಂದ ಮಾಡಿ ಕಾಂಗ್ರೆಸ್ ಸೋಲಿಸಲು ಪಿತೂರಿ ನಡೆಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.ಬಿಜೆಪಿಯವರು ದೇಶವನ್ನು ಮಾರಲು ಹೊರಟರೆ ಕಾಂಗ್ರೆಸ್ ನಾಯಕರು ಪಕ್ಷವನ್ನು ಮಾರಲು ಹೊರಟಿದ್ದಾರೆ.ಸಿದ್ದಾಂತದಲ್ಲಿ ರಾಜಿ ಮಾಡಿಕೊಳ್ಳುವ ಪಕ್ಷದ ಹುದ್ದೆಗೆ ದುಃಖದಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.
ಕಾರ್ಕಳದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವ ವಿಚಾರದಲ್ಲಿ ಕೊನೆ ಕ್ಷಣದವರೆಗೂ ತೀವೃ ಚರ್ಚೆಯ ನಡುವೆ ಕೊನೆಗೂ ಮುನಿಯಾಲು ಉದಯ ಶೆಟ್ಟಿಯವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿತ್ತು. ಇತ್ತ ಮುದ್ರಾಡಿ ಮಂಜುನಾಥ ಪೂಜಾರಿ ಕೂಡ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದರು ಮಾತ್ರವಲ್ಲದೇ ಪ್ರಬಲ ಆಕಾಂಕ್ಷಿಯಾಗಿದ್ದರು
ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಎದ್ದಿರುವ ಭಿನ್ನಮತದ ಬಿರುಗಾಳಿ ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಎಷ್ಟರ ಮಟ್ಟಿಗೆ ಹಾನಿಯಾಗುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ