ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನ ಮುಕ್ತಾಯಗೊಂಡ ನಂತರ, ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡಿದೆ. ಕೆಲವೊಂದು ಸಮೀಕ್ಷೆಗಳು ಕಾಂಗ್ರೆಸ್ ಹಾಗೂ ಬಿಜೆಪಿ ಸರಳ ಬಹುಮತ ಪಡೆದು ಅಧಿಕಾರ ಹಿಡಿಯಲಿವೆ ಎಂದು ಹೇಳಿದರೂ ಬಹುತೇಕ ಸಮೀಕ್ಷೆಗಳು ಈ ಬಾರಿಯೂ ಅತಂತ್ರ ಫಲಿತಾಂಶ ಬರುವುದಾಗಿ ಹೇಳಿವೆ. ಹೀಗಾಗಿ ಫಲಿತಾಂಶಕ್ಕೂ ಮುನ್ನವೇ ಪಕ್ಷೇತರ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಮತ್ತು ಬಿಜೆಪಿ ಗಾಳ ಹಾಕಿವೆ.
ಫಲಿತಾಂಶಕ್ಕೂ ಮುನ್ನವೇ ಗೆಲ್ಲಬಹುದಾದ ಪಕ್ಷೇತರ ಅಭ್ಯರ್ಥಿಗಳಿಗೆ ಗಾಳ ಹಾಕುತ್ತಿವೆ. ಈಗಾಗಲೇ ಸಂಭಾವ್ಯ ವಿಜೇತ ಪಕ್ಷೇತರರನ್ನು ಸಂಪರ್ಕಿಸಿರುವ ಕಾಂಗ್ರೆಸ್, ಬಿಜೆಪಿ ನಾಯಕರು ತಮ್ಮ ಕಡೆ ಸೆಳೆಯುವ ಪ್ರಯತ್ನ ನಡೆಸಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಸ್‌ಐ ಚಿಕ್ಕನಗೌಡ ಅವರನ್ನು ಈಗಾಗಲೇ ಕಾಂಗ್ರೆಸ್ ನಾಯಕರು ಸಂಪರ್ಕಸಿದ್ದಾರೆ.
ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ರಾಮಕೃಷ್ಣ ದೊಡ್ಡಮನಿ, ವಿಜಯನಗರ ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಲತಾ ಮಲ್ಲಿಕಾರ್ಜುನ್, ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ಈಗಾಗಲೇ ಕಾಂಗ್ರೆಸ್ ನಾಯಕರು ಸಂಪರ್ಕಿಸಿ ಬೆಂಬಲ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.