ಬೆಂಗಳೂರು:ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಇಂದು ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬಂದ ನಂತರ ಹಾವೇರಿಯ ಶಿಗ್ಗಾಂವಿಯಿಂದ ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೇರವಾಗಿ ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ತನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.ಈ ಬಳಿಕ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯಪಾಲರು ಅದನ್ನು ಅಂಗೀಕರಿಸಲಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ನಡೆದ ಮತದಾನ ಮತಎಣಿಕೆ ಕಾರ್ಯ ಇಂದು ನಡೆಯಿತು. ಕಾಂಗ್ರೆಸ್ ಸ್ಪಷ್ಟ ಬಹುಮತದ ಮೂಲಕ ಸರ್ಕಾರ ರಚನೆಯತ್ತ ದಾಪುಗಾಲು ಇಟ್ಟಿದೆ. 224 ಕ್ಷೇತ್ರಗಳಲ್ಲಿ ಮ್ಯಾಜಿಕ್ ನಂಬರ್ 113ರ ಗಡಿದಾಟಿ 136 ಸೀಟುಗಳನ್ನು ಗೆದ್ದಿದೆ.
ಚುನಾವಣಾ ಆಯೋಗದ ಮಾಹಿತಿಯಂತೆ ಬಿಜೆಪಿ 65 ಕ್ಷೇತ್ರಗಳಲ್ಲಿ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ, ಜೆಡಿಎಸ್ 19 ಕ್ಷೇತ್ರಗಳಲ್ಲಿ ಪಕ್ಷೇತರರು ಎರಡು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಒಬ್ಬರು, ಸರ್ವೋದಯ ಪಕ್ಷದಿಂದ ಒಬ್ಬರು ಗೆಲುವು ಸಾಧಿಸಿದ್ದಾರೆ. ಈ ಮೂಲಕ 224 ಕ್ಷೇತ್ರಗಳಲ್ಲಿ 223 ಕ್ಷೇತ್ರಗಳ ಫಲಿತಾಂಶ ಹೊರ ಬಿದ್ದಿದಿದೆ. ಈ ಬೆನ್ನಲ್ಲೆ ಸಿಎಂ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದ್ದಾರೆ.
ನಾಳೆ ಸಂಜೆ 5.30ಕ್ಕೆ ಮಹತ್ವದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಸಿಎಲ್ ಪಿ ನಾಯಕರು ಯಾರಾಗಲಿದ್ದಾರೆ ಎನ್ನುವ ಘೋಷಣೆ ಹೊರಬೀಳಲಿದೆ.