ಮಂಗಳೂರು : ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತನ ಮೇಲೆ ತಂಡವೊಂದು ದಾಳಿ ನಡೆಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ.
ಮಾಣಿಯ ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಇಬ್ಬರು ಯುವಕರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬಳಿಕ ಕಾರಿನಿಂದ ಇಳಿದ ತಂಡ ಕಟ್ಟಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ ಎಂದು ವಿಟ್ಲ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆ ನಡೆಸಿದವರು ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದಾಳಿಯ ಬಗ್ಗೆ ದಕ್ಷಿಣಕನ್ನಡ ಎಸ್ಪಿ ವಿಕ್ರಂ ಅಮಾಟೆ ಮಾಹಿತಿ ನೀಡಿದ್ದು, ವಿಕೆಟ್ ಅಥವಾ ಅದನ್ನು ಹೋಲುವ ಮರದ ತುಂಡಿನಿಂದ ಹಲ್ಲೆ ನಡೆಸಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದಾರೆ. ಘಟನೆಯ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಗೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಾ ಇದ್ದೇವೆ. ಹಲ್ಲೆಗೆ ಒಳಗಾದವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಂದ ಹೆಚ್ಚಿನ ಮಾಹಿತಿ ಪಡೆಯಲಾಗುವುದು. ಯಾರೇ ತಪ್ಪು ಮಾಡಿದರೂ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.